
ಬೆಂಗಳೂರು, 17 ಜುಲೈ (ಹಿ.ಸ.):
ಆ್ಯಂಕರ್:
ಮಂಡ್ಯ ಜಿಲ್ಲೆಯ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಒಪ್ಪಿರುವುದು ರೈತರ ಹೋರಾಟದ ಮೊದಲ ಜಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ನಾಲೆಗಳಿಗೆ ನೀರು ಹರಿಸದಿದ್ದರೆ ರೈತರೊಂದಿಗೆ ಕೆ.ಆರ್.ಎಸ್. ಅಣೆಕಟ್ಟಿಗೆ ಮುತ್ತಿಗೆ ಹಾಕುವುದಾಗಿ ನೀಡಿದ್ದ ಎಚ್ಚರಿಕೆ ಹಾಗೂ ರೈತರ ನಿರಂತರ ಹೋರಾಟದ ಪರಿಣಾಮ ಸರ್ಕಾರ ನಿರ್ಧಾರ ಬದಲಿಸಿದೆ ಎಂದು ಅವರು ತಿಳಿಸಿದ್ದಾರೆ.
ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಸೇರಿದಂತೆ ಮಂಡ್ಯ ಜಿಲ್ಲೆಯ ಹಲವೆಡೆ ಸಾವಿರಾರು ಎಕರೆ ಕಬ್ಬಿನ ಬೆಳೆ ನೀರಿನ ಕೊರತೆಯಿಂದ ಒಣಗಿ ಹೋಗಿದೆ. ಸರ್ಕಾರದ ನಿರ್ಲಕ್ಷ್ಯದಿಂದ ರೈತರಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದಾರೆ.
ಈಗಾಗಲೇ ನಾಶವಾಗಿರುವ ಕಬ್ಬಿನ ಬೆಳೆಗೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ವೈಜ್ಞಾನಿಕ ಆಧಾರದ ಮೇಲೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪರಿಹಾರ ಘೋಷಿಸದಿದ್ದರೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಜಡಿಯುವ ಹೋರಾಟ ಸೇರಿದಂತೆ ಸರ್ಕಾರದ ವಿರುದ್ಧ ಮತ್ತಷ್ಟು ಉಗ್ರ ಪ್ರತಿಭಟನೆ ನಡೆಸುವುದಾಗಿ ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುವಾಗ ಮಂಡ್ಯ ರೈತರ ಬೆಳೆಗಳು ಒಣಗುತ್ತಿದ್ದರೂ ಸರ್ಕಾರ ಗಮನಹರಿಸಲಿಲ್ಲ ಎಂದು ಆರೋಪಿಸಿರುವ ಅವರು, ರೈತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿದ ಸರ್ಕಾರದ ನೀತಿಯನ್ನು ಜನರು ಮರೆಯುವುದಿಲ್ಲ ಎಂದು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.