ಕೆ.ಆರ್. ಸರ್ಕಲ್ನಲ್ಲಿ ಬಿಎಂಟಿಸಿ ಬಸ್ ಅಪಘಾತ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಬೆಂಗಳೂರಿನ ಕೆ.ಆರ್. ಸರ್ಕಲ್ನಲ್ಲಿ ಅತಿ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹರಿದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
BengaluruNews


ಬೆಂಗಳೂರು, 18 ಜುಲೈ (ಹಿ.ಸ.)

ಆಂಕರ್ :

ಬೆಂಗಳೂರು ನಗರದ ಹೃದಯಭಾಗವಾದ ಕೆ.ಆರ್. ಸರ್ಕಲ್ನಲ್ಲಿ ಬಿಎಂಟಿಸಿ ಬಸ್ ಅಜಾಗರೂಕತೆಯಿಂದ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ, ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೆಜೆಸ್ಟಿಕ್ ಕಡೆಯಿಂದ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಹರಿದಿದೆ. ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯವೇ ಈ ಭೀಕರ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬಸ್ ಅತಿ ವೇಗವಾಗಿ ಬರುತ್ತಿದ್ದರಿಂದ ಎದುರಿಗೆ ಬರುತ್ತಿದ್ದ ವ್ಯಕ್ತಿಯನ್ನು ಗಮನಿಸಲು ಅಥವಾ ಬ್ರೇಕ್ ಹಾಕಲು ಚಾಲಕನಿಗೆ ಸಾಧ್ಯವಾಗಲಿಲ್ಲ. ಇದರಿಂದಾಗಿ ವ್ಯಕ್ತಿ ಬಸ್ಸಿನ ಚಕ್ರದಡಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಈ ಘಟನೆಯಿಂದ ಕೆ.ಆರ್. ಸರ್ಕಲ್ ಪ್ರದೇಶದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಂಟಿಸಿ ಬಸ್ಗಳ ಅಜಾಗರೂಕ ಚಾಲನೆಯಿಂದ ನಗರದಲ್ಲಿ ಪದೇ ಪದೆ ಇಂತಹ ಸಾವು-ನೋವುಗಳು ಸಂಭವಿಸುತ್ತಿದ್ದು, ಸಾರಿಗೆ ಸಂಸ್ಥೆಯ ಚಾಲಕರಿಗೆ ಸೂಕ್ತ ತರಬೇತಿ ಹಾಗೂ ಕಠಿಣ ನಿಯಮಗಳನ್ನು ಜಾರಿಗೆ ತರಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸದ್ಯ ಸ್ಥಳಕ್ಕೆ ಆಗಮಿಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತಕ್ಕೀಡಾದ ಬಸ್ಸನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ

---------------

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande