
ನವದೆಹಲಿ, 19 ಜುಲೈ (ಹಿ.ಸ.):
ಆ್ಯಂಕರ್:
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಂಟಿ ಪತ್ರ ಬರೆದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹಣಕಾಸು ವ್ಯವಹಾರಗಳ ಕುರಿತು ಸ್ವತಂತ್ರ ಹಾಗೂ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಟ್ರಸ್ಟ್‌ನಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮಗಳಿಂದ ಲಕ್ಷಾಂತರ ಭಕ್ತರ ನಂಬಿಕೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿರುವ ಅವರು, ಭಕ್ತರು ನೀಡಿರುವ ನಗದು, ಚಿನ್ನ, ಬೆಳ್ಳಿ ಸೇರಿದಂತೆ ಎಲ್ಲಾ ದೇಣಿಗೆಗಳ ಸಂಗ್ರಹ, ನಿರ್ವಹಣೆ ಹಾಗೂ ಬಳಕೆಯ ಕುರಿತು ಸಮಗ್ರ ತನಿಖೆ ನಡೆಸಿ ವರದಿಯನ್ನು ಸಾರ್ವಜನಿಕಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ತಪ್ಪಿತಸ್ಥರು ಯಾರು ಎಂಬುದನ್ನು ಪತ್ತೆಹಚ್ಚಿ, ಅವರ ಹುದ್ದೆ ಅಥವಾ ಪ್ರಭಾವವನ್ನು ಪರಿಗಣಿಸದೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪ್ರತಿಕ್ರಿಯಿಸಿರುವ ಖರ್ಗೆ ಮತ್ತು ರಾಹುಲ್ ಗಾಂಧಿ, ಭಕ್ತರು ಭಕ್ತಿಭಾವದಿಂದ ನೀಡಿದ ಕಾಣಿಕೆಗಳ ಬಳಕೆಯಲ್ಲಿ ಸಂಪೂರ್ಣ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಇರಬೇಕು ಎಂದು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.