ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ
ವಿಜಯಪುರ, 20 ಜುಲೈ (ಹಿ.ಸ.) ಆ್ಯಂಕರ್ : ಮತದಾನದ ಹಕ್ಕು ಪ್ರತಿಯೊಬ್ಬ ಭಾರತೀಯ ಪ್ರಜೆಯ ಅತ್ಯಂತ ಅಮೂಲ್ಯವಾದ ಸಾಂವಿಧಾನಿಕ ಹಕ್ಕಾಗಿದ್ದು, ಅರ್ಹ ಮತದಾರರ ಹೆಸರು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ಹಾಗೂ ನಕಲಿ, ಅನರ್ಹ ಮತ್ತು ಖೊಟ್ಟಿ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಉದ್ದೇಶದಿಂದ ಭಾರತ ಚುನಾವ
ಯತ್ನಾಳ್


ವಿಜಯಪುರ, 20 ಜುಲೈ (ಹಿ.ಸ.)

ಆ್ಯಂಕರ್ : ಮತದಾನದ ಹಕ್ಕು ಪ್ರತಿಯೊಬ್ಬ ಭಾರತೀಯ ಪ್ರಜೆಯ ಅತ್ಯಂತ ಅಮೂಲ್ಯವಾದ ಸಾಂವಿಧಾನಿಕ ಹಕ್ಕಾಗಿದ್ದು, ಅರ್ಹ ಮತದಾರರ ಹೆಸರು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ಹಾಗೂ ನಕಲಿ, ಅನರ್ಹ ಮತ್ತು ಖೊಟ್ಟಿ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಗೊಂಡಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಜಯಪುರ ನಗರ ವ್ಯಾಪ್ತಿಯಲ್ಲಿಯೂ ಎಸ್.ಐ.ಆರ್ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಪ್ರಕ್ರಿಯೆ ಪೂರ್ಣಗೊಳಿಸಲು ಉಳಿದಿರುವ ಅವಧಿ ಕಡಿಮೆ ಇರುವುದರಿಂದ ಯಾವುದೇ ನಿರ್ಲಕ್ಷ್ಯ ಮಾಡದೆ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾಪ್ರಭುತ್ವದ ಬಲಿಷ್ಠ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿಯ ಶುದ್ಧತೆ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬ ನಾಗರಿಕರು ಮತದಾನ ಮಾಡುವ ಹಕ್ಕನ್ನು ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ಹೊಂದಿದ್ದು, ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಮುಂದುವರಿದಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವೇಳೆ ವಿನಾಕಾರಣ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲ್ಪಟ್ಟಿರುವ ಅಥವಾ ಡಿಲೀಟ್ ಆಗಿರುವ ಮತದಾರರು ಆತಂಕಪಡುವ ಅಗತ್ಯವಿಲ್ಲ. ಅಂತಹವರು ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿ (ಬಿ.ಎಲ್.ಒ) ಅವರನ್ನು ಸಂಪರ್ಕಿಸಿ ನಮೂನೆ-6 ಹಾಗೂ ಘೋಷಣಾ ಪತ್ರ (ಅನುಬಂಧ-4) ಪಡೆದು ಭರ್ತಿ ಮಾಡಬೇಕು. ಬಳಿಕ ಮತದಾರರ ಗುರುತಿನ ಚೀಟಿಯ ನಕಲು ಪ್ರತಿಯನ್ನು ಲಗತ್ತಿಸಿ ಬಿ.ಎಲ್.ಒ ಅವರಿಗೆ ಸಲ್ಲಿಸಬೇಕು. ಜೊತೆಗೆ ಸಲ್ಲಿಸಿದ ಅರ್ಜಿಯ ಸ್ವೀಕೃತಿಯ ನಕಲು ಪ್ರತಿಗೆ ದಿನಾಂಕ ಹಾಗೂ ಸಹಿಯೊಂದಿಗೆ ಪಡೆದು ತಮ್ಮಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಸಿಕೊಳ್ಳುವ ಅರ್ಹ ನಾಗರಿಕರು ಸಹ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಯತ್ನಾಳ್ ತಿಳಿಸಿದ್ದಾರೆ. 2008ರ ಜುಲೈ ತಿಂಗಳಿಗೂ ಮೊದಲು ಜನಿಸಿದವರು ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳಲು ನಮೂನೆ-6 ಅನ್ನು ಬಿ.ಎಲ್.ಒ ಅವರಿಂದ ಪಡೆದು ಭರ್ತಿ ಮಾಡಿ, ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ವಿಳಾಸದ ಪುರಾವೆಯಾಗಿ ಮನೆಯ ವಿದ್ಯುತ್ ಬಿಲ್, ನೀರಿನ ಬಿಲ್, ಗ್ಯಾಸ್ ಬಿಲ್, ಬ್ಯಾಂಕ್ ಪಾಸ್ಬುಕ್, ಮನೆಯ ಕರಾರು ಪತ್ರ ಅಥವಾ ಆಧಾರ್ ಕಾರ್ಡ್ಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಹಾಗೂ ಜನ್ಮ ದಿನಾಂಕದ ಪುರಾವೆಯಾಗಿ ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಅಂಕಪಟ್ಟಿ, ಆಧಾರ್ ಕಾರ್ಡ್ ಅಥವಾ ಜನನ ಪ್ರಮಾಣ ಪತ್ರದ ನಕಲು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಬಿ.ಎಲ್.ಒ ಅವರಿಗೆ ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಮತದಾನದ ಹಕ್ಕು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಆದ್ದರಿಂದ ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವ ಜೊತೆಗೆ ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ನೆರೆಹೊರೆಯವರಿಗೂ ಎಸ್.ಐ.ಆರ್ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿ, ಎಲ್ಲರೂ ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸುವಂತೆ ಜಾಗೃತಿ ಮೂಡಿಸಬೇಕು ಎಂದು ಯತ್ನಾಳ್ ಮನವಿ ಮಾಡಿದ್ದಾರೆ.

ಮತದಾನದ ಹಕ್ಕು ದೇಶದ ಪ್ರಜಾಪ್ರಭುತ್ವದ ಜೀವಾಳವಾಗಿದ್ದು, ಅದನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಆದ್ದರಿಂದ ಚುನಾವಣಾ ಆಯೋಗದ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಸಂರಕ್ಷಿಸಿಕೊಳ್ಳಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande