
ಮೈಸೂರು, 21 ಜುಲೈ (ಹಿ.ಸ.):
ಆ್ಯಂಕರ್:
ಮೈಸೂರು ಜಿಲ್ಲೆಯ ಹುಣಸೂರಿನ ನ್ಯೂ ಮಾರುತಿ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತರನ್ನು ಹರೀಶ್ (49), ಪತ್ನಿ ನಿಶ್ಚಿತ (36), ಪುತ್ರಿಯರಾದ ನೆಕ್ಸಾ (13) ಮತ್ತು ರಕ್ಷಾ (6) ಎಂದು ಗುರುತಿಸಲಾಗಿದೆ. ಹರೀಶ್ ಮೊದಲು ಪತ್ನಿ ಮತ್ತು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾನೆ.
ಸ್ಥಳಕ್ಕೆ ಭೇಟಿ ನೀಡಿದ ಹುಣಸೂರು ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಅದರಲ್ಲಿ ಸಾಲದ ಒತ್ತಡ, ಆಸ್ತಿ ಹಂಚಿಕೆ ಹಾಗೂ ಅಗತ್ಯ ದಾಖಲೆಗಳು ಲಾಕರ್‌ನಲ್ಲಿ ಇರುವ ಬಗ್ಗೆ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಧ್ಯಮಗಳಿಗೆ ನೀಡಿರುವ ಮಾಹಿತಿ ಪ್ರಕಾರ, ಹರೀಶ್ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಜಮೀನು ಖರೀದಿ ಸಂಬಂಧ ಸಾಲದ ಒತ್ತಡ ಎದುರಿಸುತ್ತಿದ್ದ ಮಾಹಿತಿ ಡೆತ್‌ನೋಟ್‌ನಲ್ಲಿ ಕಂಡುಬಂದಿದೆ. ಅವರ ಹೆಸರಿನಲ್ಲಿ ಮೂರು ನಿವೇಶನ, ಮನೆ ಹಾಗೂ ಕಾರು ಇದ್ದು, ಅವುಗಳನ್ನು ಯಾರಿಗೆ ನೀಡಬೇಕು ಎಂಬುದನ್ನೂ ಬರೆದಿದ್ದಾರೆ ಎಂದು ಹೇಳಿದ್ದಾರೆ.
ಸುಮಾರು 14 ವರ್ಷಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಯೊಂದಿಗೆ ಹರೀಶ್ ಅವರ ತಾಯಿಯೂ ವಾಸವಾಗಿದ್ದರು. ಆದರೆ ಘಟನೆಗೆ ಎರಡು ದಿನಗಳ ಮೊದಲು ಅವರು ಪ್ರವಾಸಕ್ಕೆ ತೆರಳಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಆರ್ಥಿಕ ಒತ್ತಡ, ಕೌಟುಂಬಿಕ ಕಲಹ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII