ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಗೆ ಎನ್. ಎಸ್. ಯು.ಐ ಮುತ್ತಿಗೆ ಯತ್ನ
ಬಾಗಲಕೋಟೆ, 23 ಜುಲೈ (ಹಿ.ಸ.) ಆ್ಯಂಕರ್ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ರಾ
ಹೈ


ಬಾಗಲಕೋಟೆ, 23 ಜುಲೈ (ಹಿ.ಸ.)

ಆ್ಯಂಕರ್ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ಬಾಗಲಕೋಟೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಲಾಯಿತು.

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಎನ್ಎಸ್ಯುಐ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯತ್ತ ಸಾಗಲು ಯತ್ನಿಸಿದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟರು.

ಪ್ರತಿಭಟನಾಕಾರರು ಮಾತನಾಡಿ, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳು ಮರುಕಳಿಸುತ್ತಿರುವುದು ಅತ್ಯಂತ ಗಂಭೀರ ಸಂಗತಿಯಾಗಿದೆ. ಈ ಬೆಳವಣಿಗೆಗಳು ವಿದ್ಯಾರ್ಥಿಗಳ ಶ್ರಮ, ಪ್ರತಿಭೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ತಂದಿವೆ ಎಂದು ಆರೋಪಿಸಿದರು.

ಈ ಎಲ್ಲಾ ಬೆಳವಣಿಗೆಗಳ ನೈತಿಕ ಹೊಣೆಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಹೊತ್ತು ರಾಜೀನಾಮೆ ನೀಡಬೇಕು. ಜೊತೆಗೆ ಪರೀಕ್ಷಾ ಅಕ್ರಮಗಳ ಕುರಿತು ನ್ಯಾಯಸಮ್ಮತ ಹಾಗೂ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ವೇಳೆ ಎನ್ಎಸ್ಯುಐ ಮುಖಂಡರು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ದೇಶದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡಲು ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹವಾಗಿಸಲು ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎನ್ಎಸ್ಯುಐ ಜಿಲ್ಲಾ ಪದಾಧಿಕಾರಿಗಳು, ವಿದ್ಯಾರ್ಥಿ ಮುಖಂಡರು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಕೆಲಕಾಲ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande