
ಬಾಗಲಕೋಟೆ, 23 ಜುಲೈ (ಹಿ.ಸ.):
ಆ್ಯಂಕರ್ : ವಸತಿ ನಿವೇಶನಗಳಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅದರ ವಿರುದ್ಧ ಸಾರ್ವಜನಿಕರಿಂದ ಸಹಿ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ಬಾಗಲಕೋಟೆಯ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು, ವಸತಿ ಪ್ರದೇಶಗಳಲ್ಲಿ ನಿರ್ಮಾಣವಾಗುವ ಯಾವುದೇ ಧಾರ್ಮಿಕ ಅಥವಾ ಇತರೆ ಕಟ್ಟಡಗಳು ಸಂಬಂಧಿತ ಕಾನೂನು, ನಗರಾಭಿವೃದ್ಧಿ ನಿಯಮಗಳು ಹಾಗೂ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆದು ಮಾತ್ರ ನಿರ್ಮಾಣವಾಗಬೇಕು ಎಂದು ಹೇಳಿದರು. ಅಕ್ರಮ ನಿರ್ಮಾಣಗಳ ಕುರಿತು ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅಭಿಪ್ರಾಯವನ್ನು ಸರ್ಕಾರ ಹಾಗೂ ಜಿಲ್ಲಾಡಳಿತದ ಗಮನಕ್ಕೆ ತರಲು ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದರು. ಈ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಿ ತಮ್ಮ ಬೆಂಬಲ ಸೂಚಿಸುವಂತೆ ಮನವಿ ಮಾಡಿದರು.
ಇದೇ ವೇಳೆ ರಾಜ್ಯ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ ಹಾಗೂ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. ಅಕ್ರಮ ನಿರ್ಮಾಣಗಳ ವಿರುದ್ಧ ಕಾನೂನುಬದ್ಧ ಹೋರಾಟ ಮುಂದುವರಿಸುವುದಾಗಿ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರು, ವಸತಿ ಪ್ರದೇಶಗಳಲ್ಲಿ ಯಾವುದೇ ರೀತಿಯ ನಿರ್ಮಾಣಗಳು ಸಂಬಂಧಿತ ನಿಯಮಾವಳಿಗಳ ಪ್ರಕಾರವೇ ನಡೆಯಬೇಕು ಎಂದು ಒತ್ತಾಯಿಸಿದರು. ಸಹಿ ಸಂಗ್ರಹ ಅಭಿಯಾನವನ್ನು ನಗರದ ವಿವಿಧ ಭಾಗಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಸಂಘಟಕರು ಮಾಹಿತಿ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande