ಬೆಂಗಳೂರು ಮೂಲಸೌಕರ್ಯಕ್ಕೆ ಹೊಸ ಜೀವ: ಕೇಂದ್ರ ಸಚಿವ ವಿ. ಸೋಮಣ್ಣ
ಬೆಂಗಳೂರು, 25 ಜುಲೈ (ಹಿ.ಸ.) ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಯೋಜನೆಗಳಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ರೈಲ್ವೆ ಇಲಾಖೆ ಕೈಜೋಡಿಸಿವೆ. ನಗರದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ, ಸಚಿವ ವಿ. ಸೋಮಣ್ಣ ಹಾಗೂ ನಗರಾಭಿವೃದ್ಧಿ ಸಚಿವ ಕ
BengaluruDevelopment VSomanna


ಬೆಂಗಳೂರು, 25 ಜುಲೈ (ಹಿ.ಸ.)

ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಯೋಜನೆಗಳಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ರೈಲ್ವೆ ಇಲಾಖೆ ಕೈಜೋಡಿಸಿವೆ. ನಗರದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ, ಸಚಿವ ವಿ. ಸೋಮಣ್ಣ ಹಾಗೂ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯು ಮಹತ್ವದ ನಿರ್ಣಯಗಳಿಗೆ ಸಾಕ್ಷಿಯಾಗಿದೆ.

ಇದರ ಬೆನ್ನಲ್ಲೇ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ರಾಜ್ಯದ ಪ್ರಸ್ತಾವನೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡುವ ಮೂಲಕ ಬೆಂಬಲ ಸೂಚಿಸಿದ್ದಾರೆ.

ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಉನ್ನತ ಮಟ್ಟದ ಜಂಟಿ ಸಭೆ

ಬೆಂಗಳೂರು ಮಹಾನಗರದ ಪ್ರಮುಖ ಸವಾಲುಗಳಾಗಿರುವ ಘನತ್ಯಾಜ್ಯ ನಿರ್ವಹಣೆ ಮತ್ತು ರೈಲ್ವೆ ಜಮೀನಿಗೆ ಸಂಬಂಧಿಸಿದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಈ ಸಭೆ ಅತ್ಯಂತ ನಿರ್ಣಾಯಕವಾಯಿತು.

ಸಭೆಯ ಬಳಿಕ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ನಗರದ ಸ್ವಚ್ಛತೆ ಮತ್ತು ಸೌಂದರ್ಯೀಕರಣಕ್ಕೆ ರೈಲ್ವೆ ಇಲಾಖೆಯ ಭೂಮಿ ಹಾಗೂ ಸಹಕಾರ ಅತ್ಯಂತ ಅವಶ್ಯಕವಾಗಿದೆ. ರೈಲ್ವೆ ಹಳಿಗಳ ಅಕ್ಕಪಕ್ಕ ಹಾಗೂ ಇಲಾಖೆಗೆ ಸೇರಿದ ಜಮೀನುಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ, ಮಹತ್ವಾಕಾಂಕ್ಷೆಯ ಬೆಂಗಳೂರು ಉಪನಗರ ರೈಲು ಯೋಜನೆ ಮತ್ತು ಕೆ-ರೈಡ್ ವತಿಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಹಿರಿಯ ಅಧಿಕಾರಿಗಳೊಂದಿಗೆ ಅವರು ಪರಿಶೀಲಿಸಿದರು.

ಕೇಂದ್ರದಿಂದ ಸಂಪೂರ್ಣ ಬೆಂಬಲ: ಸಚಿವ ವಿ. ಸೋಮಣ್ಣ ಭರವಸೆ

ರಾಜ್ಯ ಸರ್ಕಾರದ ಪ್ರಸ್ತಾವನೆಗಳಿಗೆ ಸಕಾರವಾಗಿ ಸ್ಪಂದಿಸಿರುವ ಕೇಂದ್ರ ಸಚಿವ ವಿ. ಸೋಮಣ್ಣ, ಬೆಂಗಳೂರಿನ ಉಪನಗರ ರೈಲು ಯೋಜನೆ ಹಾಗೂ ಘನತ್ಯಾಜ್ಯ ನಿರ್ವಹಣಾ ಸವಾಲುಗಳನ್ನು ಎದುರಿಸಲು ರೈಲ್ವೆ ಇಲಾಖೆಯು ರಾಜ್ಯ ಸರ್ಕಾರದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಲಿದೆ ಎಂದರು. ರೈಲ್ವೆ ಭೂಮಿ ಹಸ್ತಾಂತರ ಪ್ರಕ್ರಿಯೆಯಲ್ಲಿ ಎದುರಾಗುವ ತಾಂತ್ರಿಕ ಅಡೆತಡೆಗಳನ್ನು ಶೀಘ್ರವಾಗಿ ನಿವಾರಿಸಲು ಸ್ಥಳೀಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಬೆಂಗಳೂರಿನ ಮೂಲಸೌಕರ್ಯ ಮತ್ತು 'ಸ್ವಚ್ಛ ಭಾರತ' ಪರಿಕಲ್ಪನೆ ಸಾಕಾರಗೊಳ್ಳಲು ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande