
ಬಾಗಲಕೋಟೆ, 26 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಕ್ಷದ ಪ್ರಮುಖ ಐವರು ಮುಖಂಡರು ಅಧ್ಯಕ್ಷ ಸ್ಥಾನಕ್ಕೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಸಲ್ಲಿಸಿದ್ದಾರೆ. ಎಐಸಿಸಿ ವೀಕ್ಷಕರಾದ ಬಾಲಯ್ಯ ನಾಯಕ ಅವರಿಗೆ ರಾಜು ಎಸ್. ಮನ್ನಿಕೇರಿ, ನಾಗರಾಜ್ ಹದ್ಲಿ, ಹಾಜಿಸಾಬ ಅ. ದಂಡಿನ್, ಚಂದ್ರಶೇಖರ ರಾಠೋಡ ಹಾಗೂ ರಮೇಶ್ ಬದ್ಧನೂರ್ ಅವರು ಅರ್ಜಿಗಳನ್ನು ಸಲ್ಲಿಸುವ ಮೂಲಕ ಜಿಲ್ಲಾ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣರಾಗಿದ್ದಾರೆ.
ಅರ್ಜಿಗಳನ್ನು ಸಲ್ಲಿಸಿದ ಬಳಿಕ ಮಾತನಾಡಿದ ಮುಖಂಡರು, ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದರು. ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರ ಮನೆಮನೆಗೆ ತಲುಪಿಸುವುದು ಹಾಗೂ ಮುಂಬರುವ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಸಮರ್ಪಕವಾಗಿ ಕೆಲಸ ಮಾಡುವ ಸಂಕಲ್ಪ ವ್ಯಕ್ತಪಡಿಸಿದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಪಕ್ಷದ ಸಂಘಟನೆಗೆ ಇನ್ನಷ್ಟು ಚೈತನ್ಯ ತುಂಬುವುದು, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಅವರು ಹೇಳಿದರು. ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಹಕಾರ ಮತ್ತು ಆಶೀರ್ವಾದವನ್ನು ಕೋರಿದರು.
ಕೆಪಿಸಿಸಿ ಸಂಘಟನೆಗೆ ಹೊಸ ರೂಪ ನೀಡುವ ಉದ್ದೇಶದಿಂದ ರಾಜ್ಯಾದ್ಯಂತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಅದರ ಭಾಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿಯೂ ಅರ್ಜಿ ಸ್ವೀಕಾರ ಪ್ರಕ್ರಿಯೆ ಪೂರ್ಣಗೊಂಡಿದೆ. ಎಐಸಿಸಿ ವೀಕ್ಷಕರು ಅರ್ಜಿದಾರರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ ಅವರ ಅಭಿಪ್ರಾಯಗಳನ್ನು ಆಲಿಸಿದ್ದು, ಪಕ್ಷದ ಹಿರಿಯ ನಾಯಕರ ಅಭಿಮತವನ್ನೂ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರು ಪ್ರಮುಖ ಮುಖಂಡರು ಸ್ಪರ್ಧಾಕಾಂಕ್ಷಿಗಳಾಗಿ ಕಣಕ್ಕಿಳಿದಿರುವುದರಿಂದ ಅಧ್ಯಕ್ಷರ ಆಯ್ಕೆ ಕುರಿತು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮನೆಮಾಡಿದೆ. ಪಕ್ಷದ ಹೈಕಮಾಂಡ್ ಯಾರಿಗೆ ಅವಕಾಶ ನೀಡಲಿದೆ ಎಂಬ ಚರ್ಚೆ ಕಾರ್ಯಕರ್ತರ ನಡುವೆ ಜೋರಾಗಿದೆ.
ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯಾರಿಗೆ ಮಣೆ ಬೀಳಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದ್ದು, ಹೈಕಮಾಂಡ್ನ ಅಂತಿಮ ನಿರ್ಧಾರದತ್ತ ಜಿಲ್ಲೆಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande