
ಬಾಗಲಕೋಟೆ, 26 ಜುಲೈ (ಹಿ.ಸ.):
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಮುಧೋಳ ತಾಲೂಕು ಘಟಕದ ವತಿಯಿಂದ 2025–26ನೇ ಸಾಲಿನ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ಹಾಗೂ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಅದ್ದೂರಿಯಾಗಿ ನಡೆಯಿತು.
ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್ ಉದ್ಘಾಟಿಸಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣ, ಸಂಘಟನೆ ಹಾಗೂ ಯುವಜನರ ಭಾಗವಹಿಸುವಿಕೆ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಿಕ್ಷಣದ ಮಹತ್ವವನ್ನು ಹೆಚ್ಚಿಸುವುದರ ಜೊತೆಗೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ.
ಸಮಾಜದ ಎಲ್ಲ ವರ್ಗದ ಜನರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕಣ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು ಹಾಗೂ ಶಿರೋಳ ರಾಮಾರೂಢ ಮಠದ ಶಂಕರಾರೂಢ ಸ್ವಾಮೀಜಿಗಳು ವಹಿಸಿ, ಸಮಾಜದಲ್ಲಿ ನೈತಿಕ ಮೌಲ್ಯಗಳು, ಶಿಕ್ಷಣ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಇಂತಹ ಸಮಾರಂಭಗಳ ಪಾತ್ರ ಮಹತ್ವದ್ದಾಗಿದೆ ಎಂದು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ 2025–26ನೇ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗೈದ ಅನೀಲ ಜಿಗಜಿನ್ನಿ, ಹರ್ಷವರ್ಧನ ಗುಪ್ತಾ, ಬಸಪ್ಪ ಜಮಖಂಡಿ, ಮಿಲಿಂದ ಕೋಲಾರ ಹಾಗೂ ವಿರುಪಾಕ್ಷಪ್ಪ ಅರಗಂಜಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಸಮಾರಂಭದಲ್ಲಿ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರು ಪದಗ್ರಹಣ ಸ್ವೀಕರಿಸಿ, ಸಮಾಜದ ಸಂಘಟನೆ ಬಲಪಡಿಸುವುದು, ಯುವಕರಿಗೆ ಮಾರ್ಗದರ್ಶನ, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಬಾಗಲಕೋಟೆ ಜಿಲ್ಲಾಧ್ಯಕ್ಷ ಹೊಳಬಸು ಬಾಳಶೆಟ್ಟಿ, ಮುಧೋಳ ತಾಲೂಕು ಘಟಕದ ಅಧ್ಯಕ್ಷ ಮಹಾದೇವಪ್ಪ ಅಂಗಡಿ, ಬಿಜೆಪಿ ವಿಜಯಪುರ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಧೋಳ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರಾಚಪ್ಪಣ್ಣ ಕರೆಹೊನ್ನ, ಕಾಂಗ್ರೆಸ್ ಮುಖಂಡ ಶಂಕರ ತಿಮ್ಮಾಪುರ, ಬಿಜೆಪಿ ಮುಖಂಡರಾದ ಅರುಣ ಕಾರಜೋಳ, ವಿರೇಶ ಕಲಾದಗಿ, ಸುಗೂರಪ್ಪ ಅಕ್ಕಿಮರಡಿ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಗುರುಲಿಂಗಪ್ಪ ಅಂಗಡಿ, ರವಿ ನಂದಗಾವಿ, ಸಂಗಮೇಶ ನೀಲಗುಂದ ಸೇರಿದಂತೆ ಸಮಾಜದ ಮುಖಂಡರು, ಗಣ್ಯರು, ವಿದ್ಯಾರ್ಥಿಗಳು ಹಾಗೂ ನೂರಾರು ಸಮಾಜ ಬಾಂಧವರು ಭಾಗವಹಿಸಿದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಗೆ ಗೌರವ ಸಲ್ಲಿಸುವುದು ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಬಣಜಿಗ ಸಮಾಜ ಶಿಕ್ಷಣ ಮತ್ತು ಸಾಮಾಜಿಕ ಅಭಿವೃದ್ಧಿಗೆ ತನ್ನ ಬದ್ಧತೆಯನ್ನು ಮತ್ತೊಮ್ಮೆ ಪ್ರದರ್ಶಿಸಿತು. ಸಮಾರಂಭವು ಸಮಾಜದ ಐಕ್ಯತೆ, ಸಂಘಟನೆ ಮತ್ತು ಯುವಪೀಳಿಗೆಯಲ್ಲಿ ಶೈಕ್ಷಣಿಕ ಸ್ಪೂರ್ತಿಯನ್ನು ಮೂಡಿಸಿದ ಅರ್ಥಪೂರ್ಣ ಕಾರ್ಯಕ್ರಮವಾಗಿ ಗಮನ ಸೆಳೆಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande