
ಬಾಗಲಕೋಟೆ, 26 ಜುಲೈ (ಹಿ.ಸ.)
ಆ್ಯಂಕರ್ : ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಮಾಧ್ಯಮಗಳು ಜನರ ಧ್ವನಿಯನ್ನು ಆಡಳಿತದ ಗಮನಕ್ಕೆ ತಲುಪಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿವೆ ಎಂದು ಬಾಗಲಕೋಟೆ ಜಿಲ್ಲೆಯ ಬೀಳಗಿ ಶಾಸಕ ಜಿ.ಟಿ. ಪಾಟೀಲ ಹೇಳಿದರು.
ಬೀಳಗಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೋದ್ಯಮವು ಕೇವಲ ಸುದ್ದಿಗಳನ್ನು ಪ್ರಕಟಿಸುವ ಕಾರ್ಯಕ್ಕೆ ಸೀಮಿತವಾಗದೆ, ಸಮಾಜದಲ್ಲಿ ಜಾಗೃತಿ ಮೂಡಿಸುವುದು, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗುವುದು ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಇಂತಹ ಕಾರ್ಯಕ್ರಮಗಳು ಪತ್ರಕರ್ತರ ಸೇವೆಯನ್ನು ಗೌರವಿಸುವುದರ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ವೇದಿಕೆಯಾಗಿವೆ ಎಂದು ಹೇಳಿದರು.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸುವ ಮೂಲಕ ಅವರ ಸೇವೆಯನ್ನು ಗುರುತಿಸುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಇಂತಹ ಗೌರವಗಳು ಯುವಜನತೆಯನ್ನು ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಿಸುತ್ತವೆ ಎಂದು ತಿಳಿಸಿದರು.
ಮಾಧ್ಯಮಗಳು ನಿಷ್ಪಕ್ಷಪಾತವಾಗಿ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು ಸತ್ಯವನ್ನು ಜನರಿಗೆ ತಲುಪಿಸುವ ಕೆಲಸವನ್ನು ನಿರಂತರವಾಗಿ ಮಾಡಬೇಕು. ಸಮಾಜದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಪತ್ರಕರ್ತರು ಮಹತ್ವದ ಪಾತ್ರ ವಹಿಸುತ್ತಿದ್ದು, ಅವರ ಸೇವೆ ಸದಾ ಸ್ಮರಣೀಯವಾಗಿದೆ ಎಂದು ಶಾಸಕ ಜಿ.ಟಿ. ಪಾಟೀಲ ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪತ್ರಿಕಾ ಕ್ಷೇತ್ರದ ಹಿರಿಯರು, ಯುವ ಪತ್ರಕರ್ತರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಮಾರಂಭದಲ್ಲಿ ಸ್ವಾಮೀಜಿಗಳು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಪತ್ರಿಕಾ ಮಿತ್ರರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande