
ಬೆಂಗಳೂರು, 26 ಜುಲೈ (ಹಿ.ಸ.):
ಆ್ಯಂಕರ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನಸೇವೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪ್ರಕಟಿಸಿದ ಹೇಳಿಕೆಯಲ್ಲಿ, ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿದ್ದು, ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ ಇಲ್ಲದಂತಾಗಿದೆ. ಚುನಾವಣೆಗಳಲ್ಲಿ ಅಭ್ಯರ್ಥಿಗಳೇ ಜನರಿಗೆ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ.
ವರುಣ ಕ್ಷೇತ್ರದ ಜನರು ಮತ್ತೊಮ್ಮೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದರೂ, ಆ ನಿರ್ಧಾರವನ್ನು ಬದಲಾಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಪ್ರಸ್ತುತ ತಮ್ಮ ವಯಸ್ಸು 79 ವರ್ಷವಾಗಿದ್ದು, ಸರ್ಕಾರದ ಅವಧಿ ಪೂರ್ಣಗೊಳ್ಳುವ ವೇಳೆಗೆ 81–82 ವರ್ಷವಾಗುತ್ತದೆ. ಆಗ ಹಿಂದಿನಂತೆ ಆರೋಗ್ಯ ಹಾಗೂ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
1978ರಲ್ಲಿ ತಾಲೂಕು ಮಂಡಳಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ್ದೇನೆ. 2028ರ ವೇಳೆಗೆ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳಲಿವೆ. ಈ ಅವಧಿಯಲ್ಲಿ ಸೋಲು-ಗೆಲುವು ಎರಡನ್ನೂ ಕಂಡಿದ್ದರೂ, ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ ಮತ್ತು ಆತ್ಮಸಾಕ್ಷಿಗೆ ದ್ರೋಹ ಮಾಡಿಲ್ಲ ಎಂಬ ತೃಪ್ತಿ ಇದೆ ಎಂದು ಹೇಳಿದ್ದಾರೆ.
ಐದು ದಶಕಗಳ ಕಾಲ ರಾಜ್ಯದ ಜನತೆ ನನ್ನನ್ನು ತಮ್ಮಲ್ಲೊಬ್ಬನಾಗಿ ಪ್ರೀತಿಸಿದ್ದಾರೆ. ಆ ಋಣವನ್ನು ತೀರಿಸುವ ಉದ್ದೇಶದಿಂದ ಮುಂದಿನ ಜೀವನವನ್ನೂ ಜನಸೇವೆಗೆ ಮುಡಿಪಾಗಿಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.