ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಗದಗ ಜಿಲ್ಲಾ ಪ್ರವಾಸ
ಗದಗ, 27 ಜುಲೈ (ಹಿ.ಸ.): ಆ್ಯಂಕರ್: ಮಹಿಳೆಯರ ಸುರಕ್ಷತೆ, ಸಬಲೀಕರಣ ಹಾಗೂ ಮಹಿಳಾ ಹಕ್ಕುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಜುಲೈ 30ರಿಂದ ಆಗಸ್ಟ್ 1ರವರೆಗೆ ಗದಗ ಜಿಲ್ಲೆಯಲ್ಲಿ ಮೂರು ದಿನಗಳ ಜಿಲ್ಲಾ ಪ್
ಫೋಟೋ


ಗದಗ, 27 ಜುಲೈ (ಹಿ.ಸ.):

ಆ್ಯಂಕರ್: ಮಹಿಳೆಯರ ಸುರಕ್ಷತೆ, ಸಬಲೀಕರಣ ಹಾಗೂ ಮಹಿಳಾ ಹಕ್ಕುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಜುಲೈ 30ರಿಂದ ಆಗಸ್ಟ್ 1ರವರೆಗೆ ಗದಗ ಜಿಲ್ಲೆಯಲ್ಲಿ ಮೂರು ದಿನಗಳ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಅವಧಿಯಲ್ಲಿ ವಿವಿಧ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು, ಮಹಿಳಾ ಪೊಲೀಸ್ ಠಾಣೆ, ಶಿಕ್ಷಣ ಸಂಸ್ಥೆಗಳು ಹಾಗೂ ಮಹಿಳಾ ಸಂಬಂಧಿತ ಕಾರ್ಯಕ್ರಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಅಧಿಕಾರಿಗಳೊಂದಿಗೆ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಪ್ರಕಟಣೆ ತಿಳಿಸಿದೆ.

ಜುಲೈ 30ರಂದು ಸಂಜೆ 6 ಗಂಟೆಗೆ ಬಾಗಲಕೋಟೆಯಿಂದ ಹೊರಡುವ ಡಾ. ನಾಗಲಕ್ಷ್ಮಿ ಚೌಧರಿ ಅವರು ರಾತ್ರಿ 8.30 ಗಂಟೆಗೆ ಗದಗ ಜಿಲ್ಲೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ಜುಲೈ 31ರಂದು ಬೆಳಿಗ್ಗೆ 9 ಗಂಟೆಗೆ ವಾಸ್ತವ್ಯ ಸ್ಥಳದಿಂದ ಹೊರಟು 9.15ಕ್ಕೆ ಗದಗ ನಗರದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಮಹಿಳಾ ಆರೋಗ್ಯ ಸೇವೆಗಳು ಹಾಗೂ ರೋಗಿಗಳಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಲಿದ್ದಾರೆ. ನಂತರ ಬೆಳಿಗ್ಗೆ 10.15ಕ್ಕೆ ನವನಗರದಲ್ಲಿರುವ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ನಿರ್ವಹಣೆ, ದೂರುಗಳ ವಿಲೇವಾರಿ ಹಾಗೂ ಮಹಿಳಾ ಸುರಕ್ಷತೆ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

ಬಳಿಕ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿರುವ ಅಧಿನಿಯಮ–2013 (ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ) ಕುರಿತ ತರಬೇತಿ ಕಾರ್ಯಾಗಾರ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ಸರ್ಕಾರಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, ಮಹಿಳೆಯರಿಗೆ ಸುರಕ್ಷಿತ ಕಾರ್ಯಸ್ಥಳ ನಿರ್ಮಾಣದ ಕುರಿತು ಅರಿವು ಮೂಡಿಸಲಾಗುತ್ತದೆ.

ನಂತರ ರೋಣ ಪಟ್ಟಣಕ್ಕೆ ತೆರಳಲಿರುವ ಅವರು, ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯುವ ಪೂಜ್ಯ ಮಾತೋಶ್ರೀ ಬಸಮ್ಮನವರು ಸಂಗನಗೌಡರು ಪಾಟೀಲ ಅವರ 72ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಮಹಿಳಾ ಗೋಷ್ಠಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಭಾಗವಹಿಸಲಿದ್ದಾರೆ. ಮಹಿಳಾ ಶಿಕ್ಷಣ, ಸ್ವಾವಲಂಬನೆ, ಸಾಮಾಜಿಕ ಜಾಗೃತಿ ಮತ್ತು ಮಹಿಳೆಯರ ಅಭಿವೃದ್ಧಿ ಕುರಿತ ಸಂದೇಶ ನೀಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ರೋಣ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಸೇವೆಗಳ ಕುರಿತು ಪರಿಶೀಲನೆ ನಡೆಸಲಿದ್ದು, ಬಳಿಕ ಸಂಜೆ 4.45ಕ್ಕೆ ಗದಗದ ರಾಜೀವ್ ಗಾಂಧಿ ನಗರದಲ್ಲಿರುವ ಸುಡುಗಾಡು ಸಿದ್ಧ ಸಮುದಾಯದ ನಿವಾಸ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಕುಡಿಯುವ ನೀರು, ರಸ್ತೆ, ವಿದ್ಯುತ್, ವಸತಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕುರಿತು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಗದಗದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಆಗಸ್ಟ್ 1ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಿಳಾ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಘವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗದಗ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಮಹಿಳಾ ಹಕ್ಕುಗಳು, ಸುರಕ್ಷತೆ, ಶಿಕ್ಷಣ, ಉದ್ಯೋಗಾವಕಾಶಗಳು ಹಾಗೂ ಕಾನೂನು ಅರಿವು ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಜಿಲ್ಲೆಯಲ್ಲಿ ಮಹಿಳಾ ಕಲ್ಯಾಣ ಯೋಜನೆಗಳ ಅನುಷ್ಠಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಚಟುವಟಿಕೆಗಳು, ಜಾರಿ ಸ್ಥಿತಿ, ಮಹಿಳಾ ದೌರ್ಜನ್ಯ ಪ್ರಕರಣಗಳ ಅಂಕಿ-ಅಂಶ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ಸಮಿತಿಗಳ ಕಾರ್ಯನಿರ್ವಹಣೆ, ಮಹಿಳಾ ಮೀಸಲಾತಿ, ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆಗಾಗಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಲೇವಾರಿ, ಕಾನೂನು ರಕ್ಷಣೆ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ಕ್ರಮಗಳು, ಶಿಕ್ಷಣ ಸಂಸ್ಥೆಗಳಲ್ಲಿ ಸುರಕ್ಷತಾ ವ್ಯವಸ್ಥೆ, ಮಹಿಳಾ ದೂರುಗಳ ನಿರ್ವಹಣೆ ಹಾಗೂ ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳು ಚರ್ಚೆಯಾಗಲಿವೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯ ಈ ಜಿಲ್ಲಾ ಪ್ರವಾಸವು ಮಹಿಳಾ ಸುರಕ್ಷತೆ, ಮಹಿಳಾ ಹಕ್ಕುಗಳ ರಕ್ಷಣೆ, ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ವಿವಿಧ ಇಲಾಖೆಗಳ ಕಾರ್ಯವೈಖರಿಯ ಮೌಲ್ಯಮಾಪನಕ್ಕೆ ಮಹತ್ವದ ವೇದಿಕೆಯಾಗಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande