ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಗದಗ, 29 ಜುಲೈ (ಹಿ.ಸ.) ಆ್ಯಂಕರ್:- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸ್ಥಳೀಯ ವೃಂದದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಗಸ್ಟ್ 2ರಂದು ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ಪರೀಕ್ಷೆಯನ್ನು ಪ
ಫೋಟೋ


ಗದಗ, 29 ಜುಲೈ (ಹಿ.ಸ.)

ಆ್ಯಂಕರ್:- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸ್ಥಳೀಯ ವೃಂದದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಗಸ್ಟ್ 2ರಂದು ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ಪರೀಕ್ಷೆಯನ್ನು ಪಾರದರ್ಶಕ, ಶಾಂತಿಯುತ ಹಾಗೂ ಅಕ್ರಮ ರಹಿತವಾಗಿ ನಡೆಸುವ ಉದ್ದೇಶದಿಂದ ಗದಗ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಗದಗ ಜಿಲ್ಲೆಯಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಪರೀಕ್ಷೆಯ ಸಂದರ್ಭದಲ್ಲಿ ನಕಲು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು, ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಸೇರಿದಂತೆ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಆದೇಶದಂತೆ ಆಗಸ್ಟ್ 2ರಂದು ಬೆಳಿಗ್ಗೆ 8.30 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಪರೀಕ್ಷಾರ್ಥಿಗಳು, ಪರೀಕ್ಷಾ ಕರ್ತವ್ಯದಲ್ಲಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಸಭೆ ಸೇರುವುದು ಹಾಗೂ ಗುಂಪುಗಳ ಸಂಚಾರಕ್ಕೂ ಅವಕಾಶ ಇರುವುದಿಲ್ಲ.

ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಝೆರಾಕ್ಸ್ ಅಂಗಡಿಗಳು, ಫೋಟೋಕಾಪಿ ಕೇಂದ್ರಗಳು ಹಾಗೂ ಬುಕ್ಸ್ಟಾಲ್ಗಳನ್ನು ಪರೀಕ್ಷಾ ಅವಧಿಯಲ್ಲಿ ಕಡ್ಡಾಯವಾಗಿ ಬಂದ್ ಮಾಡುವಂತೆ ಆದೇಶಿಸಲಾಗಿದೆ. ಪ್ರಶ್ನೆಪತ್ರಿಕೆ ಅಥವಾ ಇತರೆ ದಾಖಲೆಗಳ ದುರ್ಬಳಕೆ ಹಾಗೂ ಪರೀಕ್ಷೆಗೆ ಸಂಬಂಧಿಸಿದ ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಧ್ವನಿವರ್ಧಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ಶಬ್ದದ ಅಡಚಣೆ ಉಂಟಾಗದಂತೆ ಹಾಗೂ ಪರೀಕ್ಷೆ ಸುಗಮವಾಗಿ ನಡೆಯುವಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಮಾಧ್ಯಮ ಪ್ರತಿನಿಧಿಗಳಿಗೂ ವಿಶೇಷ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಹೊರಡಿಸಿದೆ. ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಸಮಯ ಹಾಗೂ ಪರೀಕ್ಷೆ ಮುಗಿಸಿ ಹೊರಬರುವ ಸಮಯದಲ್ಲಿ ಮಾತ್ರ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಆದರೆ ಪರೀಕ್ಷೆಯ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೊಠಡಿಗಳ ಒಳಗೆ ಪ್ರವೇಶ, ಪ್ರಶ್ನೆಪತ್ರಿಕೆ ಅಥವಾ ಪರೀಕ್ಷಾ ಪ್ರಕ್ರಿಯೆಯ ಚಿತ್ರೀಕರಣ ಸೇರಿದಂತೆ ಯಾವುದೇ ರೀತಿಯ ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಸೆಲ್ಯುಲರ್ ಫೋನ್, ಟ್ಯಾಬ್ಲೆಟ್, ಪೆನ್ ಡ್ರೈವ್, ಬ್ಲೂಟೂತ್ ಸಾಧನಗಳು, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೊಂಡೊಯ್ಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದರ ಜೊತೆಗೆ ಲಾಗ್ ಟೇಬಲ್, ಕೈಚೀಲ, ಪರ್ಸ್, ನೋಟ್ಸ್, ಚಾರ್ಟ್, ಬಿಡಿ ಹಾಳೆಗಳು, ದಾಖಲೆ ಮಾಡುವ ಸಾಧನಗಳು ಹಾಗೂ ಪರೀಕ್ಷೆಗೆ ಸಂಬಂಧಿಸದ ಯಾವುದೇ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ.

ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸಿ, ಪ್ರವೇಶ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು. ಕೆಇಎ ನಿಗದಿಪಡಿಸಿರುವ ಎಲ್ಲ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಯಾವುದೇ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ಸಾರ್ವಜನಿಕರು, ಪೋಷಕರು ಹಾಗೂ ವ್ಯಾಪಾರಸ್ಥರು ಜಿಲ್ಲಾಡಳಿತದ ಆದೇಶಗಳಿಗೆ ಸಹಕರಿಸಿ ಪರೀಕ್ಷೆ ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯಲು ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಯಾವುದೇ ಅಡಚಣೆಯಿಲ್ಲದೆ ಯಶಸ್ವಿಯಾಗಿ ನಡೆಯಲು ಅಗತ್ಯವಿರುವ ಎಲ್ಲ ಭದ್ರತಾ ಮತ್ತು ಆಡಳಿತಾತ್ಮಕ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande