
ಕೋಲಾರ, ಜುಲೈ ೦೩ (ಹಿ.ಸ):
ಆ್ಯಂಕರ್ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಿಗ್ಗೆ ಕೋಲಾರ ನಗರದಲ್ಲಿ ಆಯೋಜಿಸಿದ್ದ ‘ಸೈಕಲ್ ಜಾಥಾ’ವು ಅರ್ಥಪೂರ್ಣವಾಗಿ ಜರುಗಿತು.
ನಗರದ ಐಬಿ (ಬಂಗಾರಪೇಟೆ ಸರ್ಕಲ್) ನಿಂದ ಪ್ರಾರಂಭವಾದ ಈ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಂಟಿಯಾಗಿ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು, “ಪ್ರಜಾಪ್ರಭುತ್ವದ ಯಶಸ್ಸು ಮತದಾರರ ಸಕ್ರಿಯ ಭಾಗವಹಿಸುವಿಕೆಯ ಮೇಲೆ ಅವಲಂಬಿತವಾಗಿದೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಅಭಿಯಾನವು ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಒಂದು ಸುಸಂದರ್ಭವಾಗಿದೆ. ಜಿಲ್ಲೆಯ ಪ್ರತಿಯೊಬ್ಬ ನಾಗರಿಕನು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ಜವಾಬ್ದಾರಿಯುತ ಮತದಾರರಾಗಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಳ್ಳುವುದು ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಮೂಲಕ, ಪ್ರಜಾಪ್ರಭುತ್ವದ ಅಡಿಪಾಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ನಗರಸಭೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಉತ್ಸಾಹದಿಂದ ಸೈಕಲ್ ಸವಾರಿಯಲ್ಲಿ ಪಾಲ್ಗೊಂಡರು. ಇಲಾಖಾ ಸಿಬ್ಬಂದಿಗಳ ಈ ಒಗ್ಗಟ್ಟಿನ ಪ್ರದರ್ಶನವು ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಕುರಿತು ಬಲವಾದ ಸಂದೇಶವನ್ನು ರವಾನಿಸಿತು. ಜಾಥಾದ ಉದ್ದಕ್ಕೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವ, ತಿದ್ದುಪಡಿ ಮಾಡುವ ಹಾಗೂ ಪಟ್ಟಿಯಿಂದ ಹೆಸರು ಪರಿಶೀಲಿಸಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್