ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮುಂಡರಗಿಯಲ್ಲಿ ಬೈಕ್ ರ್ಯಾಲಿ
ಗದಗ, 04 ಜುಲೈ (ಹಿ.ಸ.) ಆ್ಯಂಕರ್:- ಮತದಾರರ ಪಟ್ಟಿಯನ್ನು ಇನ್ನಷ್ಟು ಸಮರ್ಪಕ ಹಾಗೂ ನಿಖರಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.-2026) ಕಾರ್ಯಕ್ರಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮುಂಡರಗಿ ತಾಲೂಕು ಸ್ವೀಪ್ ಸಮಿತಿಯ ವತಿಯಿಂ
ಫೋಟೋ


ಗದಗ, 04 ಜುಲೈ (ಹಿ.ಸ.)

ಆ್ಯಂಕರ್:- ಮತದಾರರ ಪಟ್ಟಿಯನ್ನು ಇನ್ನಷ್ಟು ಸಮರ್ಪಕ ಹಾಗೂ ನಿಖರಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.-2026) ಕಾರ್ಯಕ್ರಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮುಂಡರಗಿ ತಾಲೂಕು ಸ್ವೀಪ್ ಸಮಿತಿಯ ವತಿಯಿಂದ ಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ಆಯೋಜಿಸಲಾಯಿತು.

ತಾಲೂಕು ಪಂಚಾಯತ್, ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಹೊರಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ನಡೆದ ಈ ಜಾಗೃತಿ ರ್ಯಾಲಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಿಂದ ಆರಂಭವಾದ ಬೈಕ್ ರ್ಯಾಲಿಯು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮಾರ್ಕೆಟ್, ಅನ್ನದಾನೀಶ್ವರ ಮಠ ಸೇರಿದಂತೆ ವಿವಿಧ ಭಾಗಗಳ ಮೂಲಕ ಬಸ್ ನಿಲ್ದಾಣ ತಲುಪಿತು. ರ್ಯಾಲಿಯುದ್ದಕ್ಕೂ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ಮತದಾರರ ಪಟ್ಟಿಯ ಪರಿಷ್ಕರಣೆಯ ಮಹತ್ವವನ್ನು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ ಬೆಣ್ಣೆ, ಜೂನ್ 30ರಿಂದ ಆರಂಭಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಜುಲೈ 29ರವರೆಗೆ ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಈ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಬಿ.ಎಲ್.ಒ.ಗಳು ಕೇಳುವ ಮಾಹಿತಿಯನ್ನು ಸರಿಯಾಗಿ ಒದಗಿಸಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿ, ನಿಗದಿತ ನಮೂನೆಗಳನ್ನು ಭರ್ತಿ ಮಾಡಿ ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಸಹಕರಿಸಬೇಕು ಎಂದು ಅವರು ತಿಳಿಸಿದರು.

ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ನಾಗರಾಜ ಹಳ್ಳಿಕೇರಿ ಮಾತನಾಡಿ, ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಪ್ರಜಾಪ್ರಭುತ್ವದ ಬಲವರ್ಧನೆಗೆ ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳು ಹಾಗೂ ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವ್ಯಾಪಕ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಪ್ರತಿಯೊಬ್ಬ ನಾಗರಿಕರೂ ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ರ್ಯಾಲಿಯ ಸಮಾರೋಪ ಸಂದರ್ಭದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಘೋಷಣೆಗಳನ್ನು ಕೂಗುವ ಮೂಲಕ ಮತದಾರರ ನೋಂದಣಿ, ತಿದ್ದುಪಡಿ ಹಾಗೂ ಹೆಸರು ಸೇರ್ಪಡೆ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಅಮೂಲ್ಯ ಹಕ್ಕಾಗಿದ್ದು, ಅರ್ಹರು ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಿರಸ್ತೆದಾರ ಚಿದಾನಂದ ಸ್ವಾಗತಿಸಿದರು. ತಾಲೂಕು ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಜಗದೀಶ ಐರಣಿ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಎಸ್.ಸಿ. ಹರ್ತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ವಿಶ್ವನಾಥ ಉಳ್ಳಾಗಡ್ಡಿ, ತಾಲೂಕು ಕಾರ್ಯದರ್ಶಿ ಎಸ್.ಡಿ. ಬಸೇಗೌಡ್ರ ಸೇರಿದಂತೆ ಆರ್ಡಿಪಿಆರ್, ಕಂದಾಯ, ಶಿಕ್ಷಣ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ ಜಾಗೃತಿ ಮೂಡಿಸಿದರು.

ಸ್ವೀಪ್ ಸಮಿತಿಯ ಈ ಜಾಗೃತಿ ಅಭಿಯಾನದಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿದ್ದು, ಮತದಾರರ ಪಟ್ಟಿಯನ್ನು ಸಮಗ್ರ ಹಾಗೂ ದೋಷರಹಿತವಾಗಿಸುವ ಕಾರ್ಯಕ್ಕೆ ಸಾರ್ವಜನಿಕ ಸಹಭಾಗಿತ್ವ ಅತ್ಯಗತ್ಯ ಎಂಬ ಸಂದೇಶವನ್ನು ಅಧಿಕಾರಿಗಳು ಈ ಕಾರ್ಯಕ್ರಮದ ಮೂಲಕ ಸಾರಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande