
ಗದಗ, 04 ಜುಲೈ (ಹಿ.ಸ.)
ಆ್ಯಂಕರ್:- ಮತದಾರರ ಪಟ್ಟಿಯನ್ನು ಸಮಗ್ರ ಹಾಗೂ ದೋಷರಹಿತವಾಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.-2026) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮುಂಡರಗಿ ತಾಲೂಕು ಸ್ವೀಪ್ ಸಮಿತಿಯ ವತಿಯಿಂದ ಶನಿವಾರ ಬೃಹತ್ ಜಾಗೃತಿ ಜಾಥಾ ಹಾಗೂ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿವಿಧ ಸರ್ಕಾರಿ ಇಲಾಖೆಗಳು, ಶಿಕ್ಷಣ ಇಲಾಖೆ ಹಾಗೂ ಶಾಲಾ-ಕಾಲೇಜುಗಳ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ ಮತದಾರರ ಜಾಗೃತಿಯ ಸಂದೇಶವನ್ನು ಸಾರಿದರು.
ತಾಲೂಕು ಪಂಚಾಯತ್ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ ಬೆಣ್ಣೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಜೂನ್ 30ರಿಂದ ಆರಂಭಗೊಂಡಿದ್ದು, ಜುಲೈ 29ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ನೀಡಿ ಈ ಪ್ರಕ್ರಿಯೆಗೆ ಸಹಕರಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಸಮಾಜದಲ್ಲಿ ಜಾಗೃತಿ ಮೂಡಿಸುವ ಪ್ರಮುಖ ಶಕ್ತಿಯಾಗಿದ್ದು, ತಮ್ಮ ಪೋಷಕರು ಹಾಗೂ ಕುಟುಂಬದ ಸದಸ್ಯರು ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಮನವರಿಕೆ ಮಾಡಬೇಕು. ಅರ್ಹ ಮತದಾರರ ಹೆಸರುಗಳು ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಹಾಗೂ ತಪ್ಪುಗಳನ್ನು ಸರಿಪಡಿಸುವುದು ಪ್ರಜಾಪ್ರಭುತ್ವವನ್ನು ಬಲಪಡಿಸುವ ಪ್ರಮುಖ ಕಾರ್ಯವಾಗಿದೆ ಎಂದು ಅವರು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಗಂಗಾಧರ ಅಣ್ಣಿಗೇರಿ ಮಾತನಾಡಿ, ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸರಿಯಾದ ಮಾಹಿತಿಯನ್ನು ನೀಡಿ, ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಪ್ರತಿಯೊಬ್ಬ ನಾಗರಿಕರೂ ಜವಾಬ್ದಾರಿಯಿಂದ ಸಹಕರಿಸಬೇಕು ಎಂದು ಮನವಿ ಮಾಡಿದರು.
ಬಳಿಕ ತಾಲೂಕು ಪಂಚಾಯತ್ ಆವರಣದಿಂದ ಆರಂಭವಾದ ಬೃಹತ್ ಜಾಗೃತಿ ಜಾಥಾವು ಹೆಸರೂರು ಕ್ರಾಸ್, ಬಸ್ ನಿಲ್ದಾಣ, ಮಾರ್ಕೆಟ್, ಜಾಗೃತ್ ಸರ್ಕಲ್ ಸೇರಿದಂತೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಸಾವಿರಾರು ವಿದ್ಯಾರ್ಥಿಗಳು ಮತದಾನದ ಮಹತ್ವ, ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ನಾಗರಿಕರ ಕರ್ತವ್ಯದ ಕುರಿತು ಜಾಗೃತಿ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರ ಗಮನ ಸೆಳೆದರು. ಜಾಥಾ ಕೊಪ್ಪಳ ಕ್ರಾಸ್ನಲ್ಲಿ ಸಮಾರೋಪಗೊಂಡಿತು.
ಸಮಾರೋಪದ ವೇಳೆ ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳು ಮಾನವ ಸರಪಳಿ ನಿರ್ಮಿಸಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸಿದರು. ಅರ್ಹ ಮತದಾರರು ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು, ಮತದಾನ ನಮ್ಮ ಹಕ್ಕು, ನಮ್ಮ ಜವಾಬ್ದಾರಿ, ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಿ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೃತ್ಯುಂಜಯ ಹಿರೇಮಠ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ನಾಗೇಂದ್ರ ಪಟ್ಟಣಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಬಸಮ್ಮ ಹೂಲಿ, ಸಮಾಜಸೇವಕ ವಿ.ಎಸ್. ಗಟ್ಟಿ, ಕಂದಾಯ ಇಲಾಖೆಯ ಶಿರಸ್ತೆದಾರ ಚಿದಾನಂದ, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಬೃಹತ್ ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆ, ಘೋಷಣೆಗಳು ಹಾಗೂ ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರ ಪಾಲ್ಗೊಳ್ಳುವಿಕೆಯ ಮಹತ್ವವನ್ನು ಪರಿಣಾಮಕಾರಿಯಾಗಿ ಸಾರಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / lalita MP