
ಬೆಂಗಳೂರು, 09 ಜುಲೈ (ಹಿ.ಸ.)
ಆ್ಯಂಕರ್
ಪಾದಚಾರಿ ಮಾರ್ಗಗಳಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಬೀದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿಯ ಪದಾಧಿಕಾರಿಗಳೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು, ಪಾದಚಾರಿಗಳಿಗೆ ಸುಗಮ ಸಂಚಾರ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಅದೇ ವೇಳೆ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯವನ್ನು ಕಾಪಾಡುವ ಬದ್ಧತೆಯೂ ಸರ್ಕಾರಕ್ಕಿದೆ ಎಂದು ಹೇಳಿದರು.
ಸರ್ಕಾರ ಸದಾ ಬಡವರ ಪರವಾಗಿಯೇ ಇರುತ್ತದೆ. ನಾಗರಿಕರು ಸುರಕ್ಷಿತವಾಗಿ ಓಡಾಡಲು ಅನುಕೂಲವಾಗುವಂತೆ ಪಾದಚಾರಿ ಮಾರ್ಗಗಳನ್ನು ಒತ್ತುವರಿಯಿಂದ ಮುಕ್ತಗೊಳಿಸಲಾಗುತ್ತಿದೆ. ಇದು ಸುಪ್ರೀಂ ಕೋರ್ಟ್ ಆದೇಶದ ಅನುಷ್ಠಾನದ ಭಾಗವಾಗಿದೆ ಎಂದು ಅವರು ತಿಳಿಸಿದರು.
ಪಾದಚಾರಿ ಮಾರ್ಗಗಳು ಸಂಪೂರ್ಣವಾಗಿ ಸಾರ್ವಜನಿಕರ ಬಳಕೆಗೆ ಇರಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಒತ್ತುವರಿ ತೆರವು ಕಾರ್ಯಾಚರಣೆಗೆ ಬೀದಿ ವ್ಯಾಪಾರಿಗಳು ಸಹಕರಿಸಬೇಕು ಎಂದು ಮನವಿ ಮಾಡಿದ ಅವರು, ನಗರದ ಪ್ರಮುಖ 1,500 ಕಿಲೋಮೀಟರ್ ರಸ್ತೆಗಳ ಮೇಲೆ ವ್ಯಾಪಾರಕ್ಕೆ ಅವಕಾಶ ಇರುವುದಿಲ್ಲ. ಆದರೆ ಉಳಿದ ಶೇಕಡಾ 80ರಿಂದ 90ರಷ್ಟು ವಾರ್ಡ್ ರಸ್ತೆಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗುವುದು ಹಾಗೂ ಪಾಲಿಕೆ ಅಗತ್ಯ ಸಹಕಾರ ನೀಡಲಿದೆ ಎಂದು ಹೇಳಿದರು.
ನಗರದಲ್ಲಿ ಇದುವರೆಗೆ 430 ಕಿಲೋಮೀಟರ್ ಪಾದಚಾರಿ ಮಾರ್ಗಗಳನ್ನು ಒತ್ತುವರಿಯಿಂದ ಮುಕ್ತಗೊಳಿಸಲಾಗಿದ್ದು, ಈ ಕಾರ್ಯಾಚರಣೆಯನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದು ಸಚಿವರು ಹೇಳಿದರು.
ಈ ಕಾರ್ಯಾಚರಣೆ ಬೀದಿ ವ್ಯಾಪಾರಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಅಂಗಡಿಗಳ ವಿಸ್ತರಣೆ, ಪೆಟ್ಟಿ ಅಂಗಡಿಗಳು, ತಳ್ಳುಗಾಡಿಗಳು, ಶೀಟ್ಗಳು, ಕೆನೋಪಿಗಳು, ಮೆಟ್ಟಿಲುಗಳು, ರ್ಯಾಂಪ್ಗಳು, ತಡೆಗೋಡೆಗಳು, ಜಾಹೀರಾತು ಫಲಕಗಳು ಹಾಗೂ ತಾತ್ಕಾಲಿಕ ಮತ್ತು ಶಾಶ್ವತ ನಿರ್ಮಾಣಗಳಂತಹ ಪಾದಚಾರಿ ಮಾರ್ಗದ ಮೇಲಿನ ಎಲ್ಲ ರೀತಿಯ ಅತಿಕ್ರಮಣಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅನಧಿಕೃತ ಪಾರ್ಕಿಂಗ್, ಉದ್ಯಾನಗಳ ಅತಿಕ್ರಮಣ ಸೇರಿದಂತೆ ಉಳಿದ ಅಡೆತಡೆಗಳ ತೆರವನ್ನೂ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಬೀದಿ ಬದಿ ವ್ಯಾಪಾರಿಗಳ ಕಾಯ್ದೆಯ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ನ್ಯಾಯಾಲಯದ ಸೂಚನೆಯಂತೆ ಹೊಸ ಗುರುತಿನ ಚೀಟಿಗಳನ್ನು ಶೀಘ್ರ ವಿತರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಕೃಷ್ಣ ಬೈರೇಗೌಡ ಹೇಳಿದರು.
ಸಭೆಯಲ್ಲಿ ಮಾಜಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಕಾನೂನು ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಪಾಟೀಲ್, ಸಹಾಯಕ ಆಯುಕ್ತ ಮುರಳಿ ಹಾಗೂ ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / SNEHA K