
ನವದೆಹಲಿ, 14 ಆಗಸ್ಟ್ (ಹಿ.ಸ.):
ಆ್ಯಂಕರ್:ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಭಾಗವಾಗಿದ್ದರೂ, ಅಶ್ಲೀಲ ಅಥವಾ ಅಸಂಸದೀಯ ಟೀಕೆಗಳು ಹಾಗೂ ಸಾಂವಿಧಾನಿಕ ಹುದ್ದೆಗಳ ಅವಮಾನವನ್ನು ಸಹಿಸಲಾಗದು ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಠಾಕೂರ್, ಜನರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯನ್ನು ಸತತ ಮೂರು ಬಾರಿ ತಿರಸ್ಕರಿಸಿದ್ದಾರೆ. ಇದೀಗ ಅವರು ನಿಂದನೆಯ ರಾಜಕೀಯಕ್ಕೆ ಇಳಿದಿದ್ದಾರೆ ಎಂದು ಆರೋಪಿಸಿದರು. ರಾಹುಲ್ ಗಾಂಧಿ ಅವರ ಭಾಷೆ ಅಹಂಕಾರ ಮತ್ತು ಅಸಂಯಮದಿಂದ ಕೂಡಿದೆ ಎಂದು ಟೀಕಿಸಿದರು.
ರಾಹುಲ್ ಗಾಂಧಿ ಮಹಿಳಾ ವಿರೋಧಿ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದ ಠಾಕೂರ್, ಮಹಿಳಾ ಮೀಸಲಾತಿಯನ್ನು ಅವರು ವಿರೋಧಿಸುತ್ತಾರೆ ಎಂದು ಹೇಳಿದರು. ವಿದೇಶಿ ಮಹಿಳೆಯೊಬ್ಬರ ಕುರಿತು ರಾಹುಲ್ ಗಾಂಧಿ ಮಾಡಿರುವ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಇಂತಹ ಹೇಳಿಕೆಗಳು ಅವರ ಹಾಗೂ ಕಾಂಗ್ರೆಸ್‌ನ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಆರೋಪಿಸಿದರು.
ಪ್ರತಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಸಂಸತ್ತು ಮತ್ತು ಜನರ ನಡುವೆ ಎರಡೂ ಕಡೆ ವಿಫಲರಾಗಿದ್ದಾರೆ ಎಂದು ಠಾಕೂರ್ ಟೀಕಿಸಿದರು. ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದಂತೆ ನಡೆದುಕೊಂಡ ಅವರು, ಚರ್ಚೆಯ ಅವಕಾಶ ಸಿಕ್ಕಾಗಲೂ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಯಾವುದೇ ಪರಿಣಾಮಕಾರಿ ಸಲಹೆ ನೀಡಲು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಠಾಕೂರ್, ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಮತ್ತು ಪ್ರಶ್ನೆಗಳನ್ನು ಕೇಳುವುದು ಸಹಜ. ಆದರೆ ಭಾಷೆಯಲ್ಲಿನ ಸಂಯಮ ಹಾಗೂ ಸಾಂವಿಧಾನಿಕ ಸಂಸ್ಥೆಗಳ ಗೌರವವನ್ನು ಕಾಪಾಡುವುದು ಅತ್ಯಂತ ಅಗತ್ಯ ಎಂದು ಹೇಳಿದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.