
ಹಾವೇರಿ, 14 ಆಗಸ್ಟ್ (ಹಿ.ಸ.):
ಆ್ಯಂಕರ್:
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಕಾಂಗ್ರೆಸ್ ಸರ್ಕಾರದ ಉದ್ಧಟತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 89 ಕೋಟಿ ರೂ. ಅವ್ಯವಹಾರ ನಡೆದಿರುವುದನ್ನು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮಗ್ರ ಆರೋಪಪಟ್ಟಿ ಸಲ್ಲಿಸಿದ್ದು, ಹಣ ಎಲ್ಲಿಂದ ಬಂತು ಮತ್ತು ಎಲ್ಲಿಗೆ ಹೋಯಿತು ಎಂಬುದಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಆರೋಪಪಟ್ಟಿ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿರುವುದು ಕಾಂಗ್ರೆಸ್‌ಗೆ ಸಂವಿಧಾನ ಮತ್ತು ನೈತಿಕತೆಯ ಬಗ್ಗೆ ಇರುವ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದರು.
ಇದೇ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ಉಪ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ತಮ್ಮ ಸ್ಥಾನಮಾನ ಹಾಗೂ ಗೌರವವನ್ನು ಕಳೆದುಕೊಂಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ಪ್ರತಿಯೊಂದು ಹಂತದಲ್ಲೂ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ. ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಬೇಡ ಎಂದು ಹೇಳಿರುವ ಜಮೀರ್ ಅವರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ ಎಂದು ಅವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.