ರಾಜಿ ಸಂದಾನದ ಮೂಲಕ ನ್ಯಾಯಾಲಯದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ನ್ಯಾಯಾಧೀಶರ ಸಲಹೆ
ರಾಜಿ ಸಂದಾನದ ಮೂಲಕ ನ್ಯಾಯಾಲಯದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ನ್ಯಾಯಾಧೀಶರ ಸಲಹೆ
ಸೆಪ್ಟೆಂಬರ್ ತಿಂಗಳಿನಲ್ಲಿ ಕೋಲಾರದಲ್ಲಿ ನಡೆಯಲಿರುವ ಲೋಕ ಅದಾಲತ್ ಬಗ್ಗೆ ಕೋಲಾರ ಜಿಲ್ಲಾ ಮತ್ತು ಸೆಷನ್À್ಸ ನ್ಯಾಯಾಧೀಶರಾದ ಬಿ. ಜಯಶ್ರೀ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.


ಕೋಲಾರ, 14 ಆಗಷ್ಟ್ (ಹಿ.ಸ.):

ಆ್ಯಂಕರ್ : ನ್ಯಾಯಾಲಯಗಳಲ್ಲಿ ವರ್ಷಾನುಗಟ್ಟಲೆ ಅಲೆಯುವ ಬದಲು, ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಳ್ಳುವುದು ಅತ್ಯಂತ ಸುಲಭ ಹಾಗೂ ಜನಸ್ನೇಹಿ ವಿಧಾನವಾಗಿದೆ. ಇದರಿಂದ ಸಾರ್ವಜನಿಕರ ಹಣ ಮತ್ತು ಸಮಯ ಉಳಿಯುವುದರ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಯಶ್ರೀ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ ೧೨, ೨೦೨೬ ರಂದು ನಡೆಯಲಿರುವ ಈ ವರ್ಷದ ಮೂರನೇ 'ರಾಷ್ಟ್ರೀಯ ಲೋಕ್ ಅದಾಲತ್' (ಜನತಾ ನ್ಯಾಯಾಲಯ) ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಬಾರಿ ನಡೆದ ಎರಡನೇ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಆ ಸಂದರ್ಭದಲ್ಲಿ ೪,೯೦೮ ಚಾಲ್ತಿ ಪ್ರಕರಣಗಳು ಹಾಗೂ ೭೫,೭೭೯ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು ೮೦,೬೮೭ ಪ್ರಕರಣಗಳನ್ನು ರಾಜಿ ಪ್ರಕ್ರಿಯೆ ಮೂಲಕ ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ ಎಂದು ನ್ಯಾಯಾಧೀಶರು ಮಾಹಿತಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ನ್ಯಾಯಾಲಯಗಳಲ್ಲಿ ವಿಚ್ಛೇದನ ಹಾಗೂ ಜೀವನಾಂಶ ಕೋರಿ ಬರುವ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಗ್ರಾಮೀಣ ಭಾಗದಲ್ಲೂ ಮೊಬೈಲ್ ಬಳಕೆಯ ದುಷ್ಪರಿಣಾಮಗಳು ಎದ್ದು ಕಾಣುತ್ತಿವೆ ಎಂದರು.

ಅವಿಭಕ್ತ ಕುಟುಂಬಗಳ ಕೊರತೆ ಹಾಗೂ ದಂಪತಿಗಳ ನಡುವೆ ಸಹನೆಯ ಅಭಾವದಿಂದಾಗಿ ಸಣ್ಣಪುಟ್ಟ ವಿಚಾರಗಳಿಗೂ ವಿಚ್ಛೇದನದಂತಹ ಕಠಿಣ ನಿರ್ಧಾರಗಳಿಗೆ ಮುಂದಾಗುತ್ತಿದ್ದಾರೆ. ಇದರಿಂದ ಮಕ್ಕಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಲೋಕ್ ಅದಾಲತ್ ಮುಖಾಂತರ ಆಪ್ತ ಸಮಾಲೋಚನೆ (ಕೌನ್ಸೆಲಿಂಗ್) ನಡೆಸಿ, ಕುಟುಂಬಗಳನ್ನು ಒಂದುಗೂಡಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಲೋಕ್ ಅದಾಲತ್ನಲ್ಲಿ ಕೇವಲ ನ್ಯಾಯಾಲಯದಲ್ಲಿರುವ ಪ್ರಕರಣಗಳಷ್ಟೇ ಅಲ್ಲದೆ, ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ಬಗೆಹರಿಸಿಕೊಳ್ಳಲು ಮುಕ್ತ ಅವಕಾಶವಿದೆ. ಪ್ರಮುಖವಾಗಿ ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಕೌಟುಂಬಿಕ ವ್ಯಾಜ್ಯಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಮತ್ತು ನೀರಿನ ಶುಲ್ಕಕ್ಕೆ ಸಂಬAಧಿಸಿದ ಪ್ರಕರಣಗಳು ಹಾಗೂ ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳನ್ನು ಇಲ್ಲಿ ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಸುಪ್ರೀಂ ಕೋರ್ಟ್ ಹಾಗೂ ರಾಜ್ಯ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಬಡತನ ನಿರ್ಮೂಲನೆ, ಮಕ್ಕಳ ಸ್ನೇಹಿ ಯೋಜನೆಗಳು ಸೇರಿದಂತೆ ೧೩ ವಿಶೇಷ ಯೋಜನೆಗಳ ಬಗ್ಗೆ ಗ್ರಾಮೀಣ ಭಾಗದಲ್ಲಿ ವ್ಯಾಪಕ ಅರಿವು ಮೂಡಿಸಲಾಗುತ್ತಿದೆ. ದುರ್ಬಲ ವರ್ಗದವರಿರುವ ಹಳ್ಳಿಗಳನ್ನು ಗುರುತಿಸಿ, ಅಲ್ಲಿಯೇ ಕಾನೂನು ನೆರವು ಚಿಕಿತ್ಸಾಲಯ ತೆರೆದು ಆರು ತಿಂಗಳ ಕಾಲ ನಿರಂತರ ಕಾರ್ಯಕ್ರಮ ರೂಪಿಸಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಮೂರ್ತಿ ಪ್ರಭು ನೀಲಚಾರಿ ಬಡಿಗೇರ್, ಕೋಲಾರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್. ಶ್ರೀನಿವಾಸ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande