ಚಾಮರಾಜನಗರ ಶಾಗ್ಯ ಅರಣ್ಯದಲ್ಲಿ ಗುಂಡಿನ ಚಕಮಕಿ: ಮೂವರು ಬೇಟೆಗಾರರು ಸಾವು;ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಆದೇಶ
ಬೆಂಗಳೂರು/ಚಾಮರಾಜನಗರ, 15 ಆಗಸ್ಟ್ (ಹಿ.ಸ.): ಆ್ಯಂಕರ್:ಕಾವೇರಿ ವನ್ಯಧಾಮದ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಶನಿವಾರ ಮುಂಜಾನೆ ಅರಣ್ಯ ಸಿಬ್ಬಂದಿ ಹಾಗೂ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಶಾಗ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ
ಗ್ರಾಮಸ್ಥರ ದಾಳಿಯಿಂದ ಹಾನಿಗೊಳಗಾಗಿರುವ ಉಪ ವಲಯ ಅರಣ್ಯಾಧಿಕಾರಿ ಕಚೇರಿ


ಬೆಂಗಳೂರು/ಚಾಮರಾಜನಗರ, 15 ಆಗಸ್ಟ್ (ಹಿ.ಸ.):

ಆ್ಯಂಕರ್:ಕಾವೇರಿ ವನ್ಯಧಾಮದ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಶನಿವಾರ ಮುಂಜಾನೆ ಅರಣ್ಯ ಸಿಬ್ಬಂದಿ ಹಾಗೂ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಶಾಗ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವನ್ಯಜೀವಿಗಳ ಬೇಟೆಗೆ ಕಾಡಿಗೆ ಪ್ರವೇಶಿಸಿದ್ದ ಬೇಟೆಗಾರರ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬೇಟೆಗಾರರು ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಮುಂದಾದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಗುಂಡಿನ ಚಕಮಕಿಯಲ್ಲಿ ಅಂತೋಣಿಸ್ವಾಮಿ, ಪೀಟರ್ ಹಾಗೂ ಕುಮಾರ್ ಮೃತಪಟ್ಟಿದ್ದಾರೆ. ಒಬ್ಬ ಅರಣ್ಯ ಸಿಬ್ಬಂದಿ ಗಾಯಗೊಂಡಿದ್ದು, ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಕಾರ್ಯಾಚರಣೆ ವೇಳೆ ಒಂದು ನಾಡಬಂದೂಕು ಹಾಗೂ ಜಿಂಕೆಯ ಮೃತದೇಹವನ್ನು ಅರಣ್ಯ ಸಿಬ್ಬಂದಿ ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಮೂವರು ಬೇಟೆಗಾರರ ಸಾವಿನ ಬಳಿಕ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು. ಬೇಟೆಗಾರರನ್ನು ಮೊದಲು ಬಂಧಿಸಿ ಬಳಿಕ ಹತ್ತಿರದಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ ಸ್ಥಳೀಯರು, ಶಾಗ್ಯದಲ್ಲಿರುವ ಉಪವಲಯ ಅರಣ್ಯಾಧಿಕಾರಿ ಕಚೇರಿಗೆ ನುಗ್ಗಿ ಪೀಠೋಪಕರಣಗಳಿಗೆ ಹಾನಿ ಮಾಡಿದ್ದಾರೆ.

ಘಟನೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರ್ಕಾರಕ್ಕೆ ಘಟನೆಯ ಸಂಪೂರ್ಣ ಮಾಹಿತಿ ಲಭ್ಯವಿದೆ ಎಂದು ಹೇಳಿದರು. ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿ ಕುರಿತು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಶಸ್ತ್ರಾಸ್ತ್ರ ಸೇರಿದಂತೆ ಅಗತ್ಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣದ ವಾಸ್ತವಾಂಶವನ್ನು ರಾಜ್ಯದ ಜನರಿಗೆ ತಿಳಿಸಲಾಗುವುದು ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande