ಸ್ವಾತಂತ್ರ್ಯದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಮೋಹನ್ ಭಾಗವತ್
ನಾಗಪುರದ ಸಂಘದ ಕೇಂದ್ರ ಕಚೇರಿಯಲ್ಲಿ ತ್ರಿವರ್ಣ ಧ್ವಜಾರೋಹಣ
ध्वजारोहण के उपरांत सरसंघचालक भारत माता कि प्रतिमा को नमन करते हुए


ನಾಗ್ಪುರ, 15 ಆಗಸ್ಟ್ (ಹಿ.ಸ.):

ಆ್ಯಂಕರ್:

ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ಹೋಗುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶನಿವಾರ ನಾಗಪುರದಲ್ಲಿರುವ ಸಂಘದ ಕೇಂದ್ರ ಕಚೇರಿಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು.

1857ರ ಬಂಡಾಯದಿಂದ 1947ರಲ್ಲಿ ಸ್ವಾತಂತ್ರ್ಯ ದೊರೆಯುವವರೆಗೆ ಸುಮಾರು 90 ವರ್ಷಗಳ ಕಾಲ ದೇಶದ ಜನರು ವಿವಿಧ ಹಂತಗಳಲ್ಲಿ ಹೋರಾಟ ನಡೆಸಿದರು. ಅನೇಕರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದರು. ಅವರ ಹೋರಾಟ ಮತ್ತು ಬಲಿದಾನವನ್ನು ಸದಾ ಸ್ಮರಿಸಬೇಕು ಎಂದು ಭಾಗವತ್ ಹೇಳಿದರು.

ದೀರ್ಘ ಹೋರಾಟ ಹಾಗೂ ಅಸಂಖ್ಯಾತ ಬಲಿದಾನಗಳ ಬಳಿಕ ದೊರೆತ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಭಾರತ ಸ್ವತಂತ್ರವಾಗಿದೆ ಮತ್ತು ಅದರ ಸ್ವಾತಂತ್ರ್ಯ ಮುಂದುವರಿಯಲಿದೆ. ಆದರೆ ದೇಶವನ್ನು ಬಲಿಷ್ಠ, ಸುರಕ್ಷಿತ ಹಾಗೂ ಸಂತೃಪ್ತ ರಾಷ್ಟ್ರವನ್ನಾಗಿ ರೂಪಿಸುವ ಜವಾಬ್ದಾರಿ ಇನ್ನೂ ಪೂರ್ಣಗೊಂಡಿಲ್ಲ ಎಂದರು.

ಭಾರತದ ಮುಂದೆ ಇಂದಿಗೂ ಹಲವು ಸವಾಲುಗಳಿವೆ. ಅವುಗಳನ್ನು ಎದುರಿಸುವ ಸಂದರ್ಭದಲ್ಲಿ ದೇಶವು ತನ್ನ ಮೂಲ ಚಿಂತನೆಗಳು ಮತ್ತು ಮೌಲ್ಯಗಳಿಗೆ ಬದ್ಧವಾಗಿರಬೇಕು. ದೇಶದ ಏಕತೆ, ಭದ್ರತೆ ಹಾಗೂ ಅಭಿವೃದ್ಧಿಗಾಗಿ ಪ್ರತಿಯೊಬ್ಬ ನಾಗರಿಕನು ಜವಾಬ್ದಾರಿಯಿಂದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ವಿಶ್ವದಲ್ಲಿ ಪ್ರಮುಖ ಹಾಗೂ ಸಕಾರಾತ್ಮಕ ಪಾತ್ರ ವಹಿಸುವ ರಾಷ್ಟ್ರವಾಗಿ ಭಾರತ ರೂಪುಗೊಳ್ಳಬೇಕು. ಭಾರತವನ್ನು ‘ವಿಶ್ವಗುರು’ವನ್ನಾಗಿ ಮಾಡುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂದು ಅವರು ಹೇಳಿದರು.

ಭಾರತದ ಪ್ರಗತಿ ಕೇವಲ ಆರ್ಥಿಕ ಅಥವಾ ರಾಷ್ಟ್ರೀಯ ಅಭಿವೃದ್ಧಿಗೆ ಸೀಮಿತವಾಗಬಾರದು. ತನ್ನ ಸಾಮರ್ಥ್ಯ ಮತ್ತು ಮೌಲ್ಯಗಳ ಮೂಲಕ ಇಡೀ ಮಾನವಕುಲದ ಕಲ್ಯಾಣಕ್ಕೆ ಕೊಡುಗೆ ನೀಡುವ ದಿಸೆಯಲ್ಲಿ ದೇಶ ಸಾಗಬೇಕು ಎಂದು ಮೋಹನ್ ಭಾಗವತ್ ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯದ ಮಹತ್ವವನ್ನು ಅರಿತುಕೊಳ್ಳಬೇಕು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಬೇಕು ಹಾಗೂ ರಾಷ್ಟ್ರದ ಭವಿಷ್ಯವನ್ನು ಬಲಪಡಿಸಲು ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂಬ ಸಂದೇಶವನ್ನು ಅವರು ದೇಶವಾಸಿಗಳಿಗೆ ನೀಡಿದರು.

-------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande