

ನವದೆಹಲಿ, 16 ಆಗಸ್ಟ್ (ಹಿ.ಸ.):
ಆ್ಯಂಕರ್:
ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾನುವಾರ ‘ಸದೈವ ಅಟಲ್’ಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆ ಉಪಸಭಾಪತಿ ಹರಿವಂಶ್, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರು ಹಾಗೂ ಎನ್‌ಡಿಎ ನಾಯಕರು ವಾಜಪೇಯಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಸಾಮಾಜಿಕ ಜಾಲತಾಣದಲ್ಲಿ ವಾಜಪೇಯಿ ಅವರನ್ನು ಸ್ಮರಿಸಿ, ರಾಜಕಾರಣಿ, ಕವಿ ಹಾಗೂ ದೂರದೃಷ್ಟಿಯ ನಾಯಕನಾಗಿದ್ದ ಅಟಲ್‌ಜಿ ಭಾರತದ ಏಕತೆ, ಗೌರವ ಮತ್ತು ಕಾರ್ಯತಂತ್ರದ ಹಿತಾಸಕ್ತಿಗಳನ್ನು ಬಲಪಡಿಸಲು ತಮ್ಮ ಜೀವನವನ್ನು ಸಮರ್ಪಿಸಿದ್ದರು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರು ಅಸಾಧಾರಣ ದೂರದೃಷ್ಟಿಯ ವಿಶಿಷ್ಟ ರಾಜಕಾರಣಿಯಾಗಿದ್ದು, ತಮ್ಮ ಜೀವನವನ್ನು ರಾಷ್ಟ್ರ ಸೇವೆಗೆ ಮುಡಿಪಾಗಿಟ್ಟಿದ್ದರು ಎಂದು ಸ್ಮರಿಸಿದರು. ಅವರ ಚಿಂತನೆಗಳು ಹಾಗೂ ನಾಯಕತ್ವ ಹಲವು ತಲೆಮಾರುಗಳಿಗೆ ಸ್ಫೂರ್ತಿಯಾಗಿವೆ ಎಂದು ಹೇಳಿದರು.
ಗೃಹ ಸಚಿವ ಅಮಿತ್ ಶಾ ಅವರು ವಾಜಪೇಯಿ ಅವರನ್ನು ದೇಶಭಕ್ತ ರಾಜಕಾರಣಿ ಎಂದು ಬಣ್ಣಿಸಿ, ಪರಮಾಣು ಪರೀಕ್ಷೆ ಹಾಗೂ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತದ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿದರು ಎಂದು ಹೇಳಿದರು. ಮೌಲ್ಯಾಧಾರಿತ ರಾಜಕಾರಣದ ಮೂಲಕ ಅಂತ್ಯೋದಯ ಮತ್ತು ಉತ್ತಮ ಆಡಳಿತದ ಪರಿಕಲ್ಪನೆಗೆ ಬಲ ನೀಡಿದರು ಎಂದು ಸ್ಮರಿಸಿದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.