
ಬೆಂಗಳೂರು, 16 ಆಗಸ್ಟ್ (ಹಿ.ಸ.):
ಆ್ಯಂಕರ್:ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮೂವರು ಮೃತಪಟ್ಟಿರುವ ಗುಂಡಿನ ಚಕಮಕಿ ಪ್ರಕರಣವನ್ನು ಬಿಜೆಪಿ ನಾಯಕ ಸಿ.ಟಿ. ರವಿ ತೀವ್ರವಾಗಿ ಖಂಡಿಸಿದ್ದಾರೆ.
ಬೇಟೆಗಾರರು ಎಂಬ ಕಾರಣ ನೀಡಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಇದು ಖಂಡನೀಯ ಘಟನೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಂದುವೇಳೆ ಅವರು ಬೇಟೆಗೆ ತೆರಳಿದ್ದರೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ದಾಳಿ ನಡೆಸಿದ್ದರೆ ಕೂಡ ಮೂವರ ಪ್ರಾಣ ಹೋಗುವಂತೆ ನಡೆದ ಕ್ರಮವನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸಿ.ಟಿ. ರವಿ ಪ್ರಶ್ನಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ ಇಲಾಖೆಯ ಹೇಳಿಕೆಗಳಲ್ಲಿ ವೈರುಧ್ಯಗಳಿದ್ದು, ಪ್ರಕರಣದ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮೃತರಾದ ಅಂತೋಣಿಸ್ವಾಮಿ, ಪೀಟರ್ ಮತ್ತು ಕುಮಾರ್ ಅವರು ಅಲ್ಪಸಂಖ್ಯಾತ ಬಡ ಕುಟುಂಬಗಳಿಗೆ ಸೇರಿದವರಾಗಿದ್ದು, ಸರ್ಕಾರ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಿ ನ್ಯಾಯ ಒದಗಿಸಬೇಕು ಎಂದು ಸಿ.ಟಿ. ರವಿ ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.