
ಕೋಲಾರ, ೧೬ ಆಗಸ್ಟ್ (ಹಿ.ಸ.):
ಆ್ಯಂಕರ್ : ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ರಾಮಲೀಲಾ ಮೈದಾನವನ್ನು ಗೋಮೂತ್ರ ಹಾಕಿ ಶುದ್ಧೀಕರಿಸಿರುವ ಘಟನೆ ಅಮಾನವೀಯವಾಗಿದೆ. ದೇಶಕ್ಕೆ ಸ್ವಾತಂತ್ರö್ಯ ಬಂದು ಎಂಬತ್ತು ವರ್ಷಗಳು ಕಳೆದಿದ್ದರೂ ದೇಶದ ದಮನಿತರ ವರ್ಗಗಳನ್ನು ಅಮಾನೀಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ರಾಮಲೀಲ ಮೈದಾನವನ್ನು ಶುದ್ದೀರಕರಿಸಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಎಸ್ಸಿ ಘಟಕದ ಮುಖಂಡ ಲಕ್ಷ್ಮೀಸಾಗರ ಜಿ. ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.
ಸ್ವಾತಂತ್ರ್ಯ ಬಂದು ಎಂಬತ್ತು ವರ್ಷಗಳಾದರೂ ದಲಿತ ಸಮುದಾಯದ ಹಿರಿಯ ನಾಯಕ ಹಾಗೂ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಭಾಷಣ ಮಾಡಿದ ಸ್ಥಳವನ್ನು ಗೋಮೂತ್ರದಿಂದ ಶುದ್ಧೀಕರಿಸುವಂತಹ ಮನಸ್ಥಿತಿ ಇರುವುದು ನಾಗರೀಕ ಸಮಾಜ ತಲೆತಗ್ಗಿಸುವ ವಿಚಾರವಾಗಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಮನುವಾದಿಗಳು ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಮತ್ತು ಸಂಘ ಪರಿವಾರ ಈ ಘಟನೆಯ ಬಗ್ಗೆ ಮೌನ ವಹಿಸಿರುವುದು ನೋಡಿದರೆ ಅದರ ಹಿಂದೆ ರಹಸ್ಯ ಕಾರ್ಯಸೂಚಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಲಿತರಿಗೆ ನಿಜವಾದ ಗೌರವ, ಸಮಾನತೆ ಮತ್ತು ಸಾಮಾಜಿಕ ನ್ಯಾಯ ನೀಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ದಲಿತರ ಹಕ್ಕು, ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಆದರೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ದಲಿತರನ್ನು ಕೇವಲ ಮತಬ್ಯಾಂಕ್ನಂತೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದರು.
ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಸಾಮಾಜಿಕ ಸಮಾನತೆಯನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಯಾವುದೇ ವ್ಯಕ್ತಿಯ ಜಾತಿ ಅಥವಾ ಸಾಮಾಜಿಕ ಹಿನ್ನೆಲೆಯನ್ನು ಆಧರಿಸಿ ಅವಮಾನಿಸುವ ಕೃತ್ಯಗಳಿಗೆ ಅವಕಾಶ ನೀಡಬಾರದು. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.
ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಯಾವುದೇ ರೀತಿಯ ಘಟನೆಗಳಿಗೆ ಅವಕಾಶ ನೀಡದೆ, ಎಲ್ಲ ಸಮುದಾಯಗಳ ಗೌರವ ಮತ್ತು ಸಮಾನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸುನಿಲ್ ಕುಮಾರ್ ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್