
ನವದೆಹಲಿ, 24 ಆಗಸ್ಟ್ (ಹಿ.ಸ.):
ಆ್ಯಂಕರ್:
ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ನಿರ್ದೇಶನವನ್ನು ಜಾರಿಗೊಳಿಸುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ದ್ವಿಸದಸ್ಯ ಪೀಠ ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು. ಉಭಯ ರಾಜ್ಯಗಳು ಮುಂದಿನ ವಿಚಾರಣೆಗೆ ನವೀಕೃತ ಅಂಕಿ-ಅಂಶಗಳೊಂದಿಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.
ತಮಿಳುನಾಡು ಪರ ಹಿರಿಯ ವಕೀಲ ಸಿಎಸ್ ವೈದ್ಯನಾಥನ್, ರಾಜ್ಯಕ್ಕೆ ಬರಬೇಕಾದ ಪ್ರಮಾಣದ ಕಾವೇರಿ ನೀರು ಲಭ್ಯವಾಗುತ್ತಿಲ್ಲ ಎಂದು ವಾದಿಸಿದರು. ಕರ್ನಾಟಕದ ಜಲಾಶಯಗಳಲ್ಲಿ ಸುಮಾರು 78 ಟಿಎಂಸಿ ನೀರು ಸಂಗ್ರಹವಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದ ಅವರು, ಒಳಹರಿವು, ಬಳಕೆ, ನೀರು ಬಿಡುಗಡೆ ಹಾಗೂ ಜಲಾಶಯಗಳಲ್ಲಿನ ಸಂಗ್ರಹದ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧಿಕಾರ ಮತ್ತು ಕರ್ತವ್ಯಗಳನ್ನು ಪರಿಶೀಲಿಸುವಂತೆ ಮನವಿ ಮಾಡಿದರು.
ಈ ವೇಳೆ ಕರ್ನಾಟಕದಿಂದ ಈಗಾಗಲೇ ಬಿಡುಗಡೆಯಾದ ನೀರಿನ ಪ್ರಮಾಣಕ್ಕೆ ಸಂಬಂಧಿಸಿದ ಚಾರ್ಟ್ ಅನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ವಿಕ್ರಮ್ ನಾಥ್, ಪ್ರಾಧಿಕಾರದ ಸೂಚನೆಯಂತೆ ನೀರು ಒದಗಿಸಿರುವುದು ಚಾರ್ಟ್‌ನಿಂದ ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಕರ್ನಾಟಕದ ಪರ ಹಿರಿಯ ವಕೀಲ ಶ್ಯಾಮ್ ದಿವಾನ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಮಂಗಳವಾರ ನಡೆಯಲಿದ್ದು, ಅದರ ಬಳಿಕ ಪರಿಸ್ಥಿತಿಯ ಕುರಿತು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ತಿಳಿಸಿದರು.
ಎರಡೂ ರಾಜ್ಯಗಳ ವಾದ ಆಲಿಸಿದ ನ್ಯಾಯಪೀಠ, ಪ್ರಸ್ತುತ ಅಂಕಿ-ಅಂಶಗಳ ಬದಲಾಗಿ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗಳ ಬಳಿಕ ಲಭ್ಯವಾಗುವ ಹೊಸ ಅಂಕಿ-ಅಂಶಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು.
ಹೀಗಾಗಿ ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 31, ಸೋಮವಾರ ನಡೆಯಲಿದ್ದು, ಅಲ್ಲಿಯವರೆಗೆ ಹಿಂದಿನ ಆದೇಶದಂತೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವ ನಿರ್ದೇಶನ ಕರ್ನಾಟಕಕ್ಕೆ ಮುಂದುವರಿಯಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.