
ಕೋಲಾರ,೨೪ ಆಗಸ್ಟ್ (ಹಿ.ಸ)
ಆ್ಯಂಕರ್: ಸುಹೆಲ್ದೆವ್ ಭಾರತೀಯ ಸಮಾಜ ಪಕ್ಷ (ಎಸ್ಬಿಎಸ್ಪಿ)ಯ ಸಂಘಟನೆಯನ್ನು ದಕ್ಷಿಣ ಭಾರತದಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ತೆಲಂಗಾಣ ರಾಜ್ಯದಲ್ಲಿ ಪಕ್ಷದ ಆಯ್ಕೆ ಸಮಿತಿಯ ಸಭೆ ನಡೆಯಿತು ಎಂದು ಪಕ್ಷದ ಕೋಲಾರ ಜಿಲ್ಲಾ ಮುಖಂಡ ಪಿ. ಅಭಿಮನ್ಯು ಮಣಿ ಜಿ. ತಿಳಿಸಿದ್ದಾರೆ.
ಸುಹೆಲ್ದೆವ್ ಭಾರತೀಯ ಸಮಾಜ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಭಾರತ ಉಸ್ತುವಾರಿ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಆಂಧ್ರಪ್ರದೇಶ ಉಸ್ತುವಾರಿ ಅಧ್ಯಕ್ಷರಾದ ಟಿ. ಮಧು ಹಾಗೂ ಕರ್ಣಕರ್ ವಹಿಸಿದ್ದರು ಎಂದು ತಿಳಿಸಿದ್ದಾರೆ.
ತೆಲಂಗಾಣದಲ್ಲಿ ನಡೆದ ಆಯ್ಕೆ ಸಭೆಯಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು, ವಿವಿಧ ಹುದ್ದೆಗಳಿಗೆ ಸೂಕ್ತ ಹಾಗೂ ಕ್ರಿಯಾಶೀಲ ಪದಾಧಿಕಾರಿಗಳನ್ನು ಆಯ್ಕೆ ಮಾಡುವುದು, ಪಕ್ಷದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಬಲ್ಲ ಮುಖಂಡರನ್ನು ಗುರುತಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು.
ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಪಕ್ಷದ ಸಂಘಟನಾ ಚಟುವಟಿಕೆಗಳನ್ನು ವಿಸ್ತರಿಸುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಸಮಾಲೋಚನೆ ನಡೆಯಿತು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಉದ್ದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವುದರ ಜೊತೆಗೆ, ತಳಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕಟ್ಟುವ ಬಗ್ಗೆಯೂ ಚರ್ಚಿಸಲಾಯಿತು ಎಂದು ಅವರು ತಿಳಿಸಿದರು.
ಆಯ್ಕೆ ಸಮಿತಿ ಸಭೆಯಲ್ಲಿ ಪಕ್ಷದ ಪ್ರಮುಖ ಮುಖಂಡರು, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಮತ್ತು ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು. ಪಕ್ಷದ ವಿವಿಧ ಜವಾಬ್ದಾರಿಗಳಿಗೆ ಅರ್ಹತೆ, ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಪಕ್ಷದ ಮೇಲಿನ ಬದ್ಧತೆಯನ್ನು ಪರಿಗಣಿಸಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ತೆಲಂಗಾಣ ರಾಜ್ಯದಲ್ಲಿ ನಡೆಯಲಿರುವ ಈ ಎಸ್ಬಿಎಸ್ಪಿ ಆಯ್ಕೆ ಸಮಿತಿ ಸಭೆ ಪಕ್ಷದ ಮುಂದಿನ ಸಂಘಟನಾ ಬೆಳವಣಿಗೆಗೆ ಮಹತ್ವದ ಹೆಜ್ಜೆಯಾಗಲಿದೆ. ಸಭೆಯ ಮೂಲಕ ದಕ್ಷಿಣ ಭಾರತದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಪಕ್ಷದೊಂದಿಗೆ ಸಂಪರ್ಕಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಜನಪರ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಪಕ್ಷವನ್ನು ಜನರೊಂದಿಗೆ ಮತ್ತಷ್ಟು ಹತ್ತಿರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪಕ್ಷದ ಸಂಘಟನೆಯನ್ನು ಗ್ರಾಮ, ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ವಿಸ್ತರಿಸುವ ಕುರಿತು ಸಭೆಯಲ್ಲಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಪಿ. ಅಭಿಮನ್ಯು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್