
ಬಾಗಲಕೋಟೆ, 26 ಆಗಸ್ಟ್ (ಹಿ.ಸ.)
ಆ್ಯಂಕರ್ : ಸರ್ಕಾರದ ಮಟ್ಟದಲ್ಲಿ ನೂತನವಾಗಿ ಕಾರ್ಯಾರಂಭಗೊಂಡಿರುವ ಪ್ರಜಾಸೇವಾ ಇಲಾಖೆಯ ವತಿಯಿಂದ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಸಾಧ್ಯವಾದಷ್ಟು ಶೀಘ್ರ ಪರಿಹಾರ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಿಂದ ಪ್ರಜಾಸೇವಾ ಆಂದೋಲನ ಆರಂಭಿಸಲಾಗುವುದು ಎಂದು ಮುಧೋಳ ತಹಶೀಲ್ದಾರ್ ಡಾ. ಚಿಕ್ಕಪ್ಪ ನಾಯಕ ತಿಳಿಸಿದರು.
ನಗರದಲ್ಲಿ ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಸೇವಾ ಆಂದೋಲನವನ್ನು ಪ್ರತೀ ಶನಿವಾರ ಆಯ್ದ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗುವುದು. ಈ ಸಂದರ್ಭದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಜನರ ಬಳಿಗೆ ತೆರಳಿ, ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೇವೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡುವುದರ ಜೊತೆಗೆ, ಕಚೇರಿಗಳಿಗೆ ಪದೇಪದೇ ಅಲೆದಾಡಬೇಕಾದ ಪರಿಸ್ಥಿತಿಯನ್ನು ತಪ್ಪಿಸುವುದು ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆ, ಅಹವಾಲು ಹಾಗೂ ಅಗತ್ಯ ದಾಖಲೆಗಳೊಂದಿಗೆ ಆಂದೋಲನದಲ್ಲಿ ಭಾಗವಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಮೊದಲ ಹಾಗೂ ಎರಡನೇ ಶನಿವಾರ ನಡೆಯುವ ಆಂದೋಲನಕ್ಕೆ ಸಂಬಂಧಿಸಿದ ಸ್ಥಳವನ್ನು ಸಚಿವರು ಆಯ್ಕೆ ಮಾಡಲಿದ್ದು, ಮೂರನೇ ಹಾಗೂ ನಾಲ್ಕನೇ ಶನಿವಾರ ನಡೆಯುವ ಆಂದೋಲನದ ಸ್ಥಳವನ್ನು ಶಾಸಕರು ಆಯ್ಕೆ ಮಾಡಲಿದ್ದಾರೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದರು.
ಮುಧೋಳ ತಾಲೂಕಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ಪ್ರಜಾಸೇವಾ ಆಂದೋಲನಕ್ಕೆ ಈಗಾಗಲೇ ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ ಮೊದಲ ಶನಿವಾರ ಲೋಕಾಪುರ, ಎರಡನೇ ಶನಿವಾರ ಮುಧೋಳ, ಮೂರನೇ ಶನಿವಾರ ಬೆಳಗಲಿ ಹಾಗೂ ಕೊನೆಯ ಶನಿವಾರ ಮಂಟೂರ ಗ್ರಾಮದಲ್ಲಿ ಪ್ರಜಾಸೇವಾ ಆಂದೋಲನ ನಡೆಸಲು ನಿರ್ಧರಿಸಲಾಗಿದೆ ಎಂದರು.
ಆಂದೋಲನದ ದಿನದಂದು ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೃಷಿ, ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾಧ್ಯವಿರುವ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲು ಹಾಗೂ ಉಳಿದ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಶೀಘ್ರವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಪ್ರಜಾಸೇವಾ ಆಂದೋಲನದ ಸದುಪಯೋಗವನ್ನು ತಾಲೂಕಿನ ಸಾರ್ವಜನಿಕರು ಪಡೆದುಕೊಳ್ಳಬೇಕು. ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳುವಂತೆ ತಹಶೀಲ್ದಾರ್ ಡಾ. ಚಿಕ್ಕಪ್ಪ ನಾಯಕ ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande