
ಬಳ್ಳಾರಿ, 27 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಿಜೆಪಿ ಹಮ್ಮಿಕೊಂಡಿರುವ 175 ಕಿಲೋ ಮೀಟರ್ ಉದ್ದದ ಪಾದಯಾತ್ರೆ ಪ್ರಾರಂಭದ ಮೊದಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವ ಸಾಧ್ಯತೆಗಳಿದ್ದು, ಅವರು ರಾಜೀನಾಮೆ ನೀಡಿದರೂ ಪಾದಯಾತ್ರೆ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ ಲಿಂಗಸೂರುನಿಂದ ಪಾದಯಾತ್ರೆ ಪ್ರಾರಂಭ ಆಗಿ ಬಳ್ಳಾರಿಯಲ್ಲಿ ಸಮಾರೋಪಗೊಳ್ಳಲಿದೆ. ಮಸ್ಕಿ, ಸಿಂಧನೂರು, ಕಾರಟಗಿ, ಗಂಗಾವತಿ, ಕಂಪ್ಲಿ ಮೂಲಕ ಪಾದಯಾತ್ರೆಯು ಬಳ್ಳಾರಿಗೆ ತಲುಪುವುದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಾದಯಾತ್ರೆಯ ನೇತೃತ್ವವಹಿಸಲಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣ ಸ್ವಾಮಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶಾಸಕ ಗಾಲಿ ಜನಾರ್ದನರೆಡ್ಡಿ, ಮುಖಂಡರಾದ ಬಿ. ಶ್ರೀರಾಮುಲು ಸೇರಿದಂತೆ ಪಕ್ಷದ ಕೇಂದ್ರ ಹಾಗೂ ರಾಜ್ಯ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ಬಿಜೆಪಿಯ ಪಾದಯಾತ್ರೆಯ ಮೊದಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವ ಸಾಧ್ಯತೆಗಳೇ ಹೆಚ್ಚಿವೆ. ಆದರೆ, ನಮ್ಮ ಪಾದಯಾತ್ರೆಯ ಬಗ್ಗೆ ಯಾವುದೇ ಗೊಂದಲಗಳು ಬೇಡ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ವಿರೋಧಿಸಿ ಸೆಪ್ಟಂಬರ್ 1ರಿಂದ ಲಿಂಗಸೂರು ನಿಂದ ಬಳ್ಳಾರಿ ವರೆಗೆ 10 ದಿನಗಳ ಬೃಹತ್ ಪಾದಯಾತ್ರೆ ನಡೆಯಲಿದೆ. ನಿತ್ಯ 16 ರಿಂದ 18 ಕಿಲೋ ಮೀಟರ್ ಪಾದಯಾತ್ರೆ ನಡೆಯಲಿದೆ ಎಂದರು.
ಶಾಸಕ ವೈ.ಎಂ. ಸತೀಶ್, ಮುಖಂಡರಾದ ತಮ್ಮೇಶ ಗೌಡ್ರು, ಶರಣು ತಳ್ಳಿಕೇರಿ, ವಿಭಾಗ ಪ್ರಭಾರಿಗಳಾದ ಅಮರನಾಥ್ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್. ಗುರುಲಿಂಗನ ಗೌಡ, ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಚ್. ಹನುಮಂತಪ್ಪ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಧರಪ್ಪ ನಾಯಕ್, ಮುರಹರಗೌಡ, ಡಾ. ಅರುಣಾ ಕಾಮಿನೇನಿ, ವಿಜಯಲಕ್ಷ್ಮೀ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್