
ವಿಜಯಪುರ, 27 ಆಗಸ್ಟ್ (ಹಿ.ಸ.)
ಆ್ಯಂಕರ್ : ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಕುರಿತು ವರದಿ ಮಾಡಿದ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಪ್ರಕರಣವನ್ನು ಕರ್ನಾಟಕ ರಾಜ್ಯ ಅಂಗವಿಕಲ ಹಾಗೂ ಪಾಲಕರ ಒಕ್ಕೂಟ ತೀವ್ರವಾಗಿ ಖಂಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಿ, ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳ ಜಾಲ, ಅದರ ಹಿಂದೆ ಇರುವ ವ್ಯಕ್ತಿಗಳು ಹಾಗೂ ಅವರಿಗೆ ಬೆಂಬಲ ನೀಡುತ್ತಿರುವವರ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಪತ್ರಕರ್ತ ಪರಶುರಾಮ ಶಿವಶರಣ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಡಾ. ಆನಂದ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾಧ್ಯಕ್ಷ ವಿನೋದ ಎಂ. ಖೇಡ ಮಾತನಾಡಿ, ಸರ್ಕಾರದ ಜನಪರ ಯೋಜನೆಯಾದ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಕುರಿತು ಪತ್ರಕರ್ತ ಪರಶುರಾಮ ಶಿವಶರಣ ಅವರು ಆಗಸ್ಟ್ 20ರಂದು ಹೊಸದಿಗಂತ ಪತ್ರಿಕೆಯಲ್ಲಿ ‘ಬೇರು ಬಿಟ್ಟ ಅಕ್ರಮ ದಂಧೆಕೋರರ ಜಾಲ, ಕಾಳಸಂತೆಕೋರರಿಂದ ಮಹಾರಾಷ್ಟ್ರಕ್ಕೆ ಸಾಗಣೆ, ಅನ್ನಭಾಗ್ಯ ಅಕ್ಕಿ ಖದೀಮರಿಗೆ ವಿಜಯಪುರ ಸ್ವರ್ಗ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿದ್ದರು ಎಂದು ಹೇಳಿದರು.
ಸರ್ಕಾರದ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬ ಉದ್ದೇಶದಿಂದ ನಡೆಯುವ ಅಕ್ರಮಗಳನ್ನು ಬೆಳಕಿಗೆ ತಂದು, ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತರುವುದು ಪತ್ರಕರ್ತರ ಸಾಮಾಜಿಕ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಶಿವಶರಣ ಅವರ ವರದಿ ಸಮಾಜದ ಹಿತದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ದಂಧೆಕೋರರು ವರದಿಯಿಂದ ಕುಪಿತರಾಗಿ ಪತ್ರಕರ್ತರ ಮನೆಗೆ ತೆರಳಿ ಜೀವ ಬೆದರಿಕೆ ಹಾಕಿರುವುದು ಅತ್ಯಂತ ಗಂಭೀರ ವಿಚಾರವಾಗಿದೆ. ಅದರಲ್ಲೂ ಜಾತಿ ನಿಂದನೆ ಮಾಡಿರುವ ಆರೋಪವೂ ಕೇಳಿಬಂದಿರುವುದರಿಂದ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಒತ್ತಡ, ರಾಜಕೀಯ ಪ್ರಭಾವ ಅಥವಾ ಪ್ರಭಾವಿ ವ್ಯಕ್ತಿಗಳ ಹಸ್ತಕ್ಷೇಪಕ್ಕೆ ಅವಕಾಶ ನೀಡದೆ ತನಿಖೆ ನಡೆಸಬೇಕು ಎಂದು ವಿನೋದ ಖೇಡ ಆಗ್ರಹಿಸಿದರು.
ಪತ್ರಕರ್ತರಿಗೆ ಬೆದರಿಕೆ ಹಾಕಿ ಅಕ್ರಮ ದಂಧೆಗಳನ್ನು ಮುಚ್ಚಿಹಾಕುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ಮುಂದುವರಿದರೆ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಕುಸಿಯುವ ಸಾಧ್ಯತೆ ಇದೆ. ಆದ್ದರಿಂದ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಾನೂನಿನ ಮುಂದೆ ತಂದು ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ವಾಲಿಕಾರ ಮಾತನಾಡಿ, ಸರ್ಕಾರದ ಜನಪರ ಯೋಜನೆಯ ದುರ್ಬಳಕೆಯ ಕುರಿತು ವರದಿ ಮಾಡಿದ ಪತ್ರಕರ್ತರ ಮನೆಗೆ ತೆರಳಿ ಬೆದರಿಕೆ ಹಾಕುವ ಮಟ್ಟಿಗೆ ಜಿಲ್ಲೆಯಲ್ಲಿ ಅಕ್ರಮ ದಂಧೆಕೋರರು ಬೆಳೆದಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದರು.
ಪೊಲೀಸ್ ಇಲಾಖೆ ಹಾಗೂ ಕಾನೂನಿನ ಭಯವಿಲ್ಲದೆ ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪತ್ರಕರ್ತರು ಸಮಾಜದ ಸಮಸ್ಯೆಗಳನ್ನು ಮತ್ತು ಅಕ್ರಮಗಳನ್ನು ಬೆಳಕಿಗೆ ತರುವ ಸಂದರ್ಭದಲ್ಲಿ ಅವರಿಗೆ ಬೆದರಿಕೆ ಎದುರಾದರೆ, ಅದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಧಕ್ಕೆ ಉಂಟುಮಾಡುತ್ತದೆ. ಹೀಗಾಗಿ ಪತ್ರಕರ್ತರ ಸುರಕ್ಷತೆಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಅನ್ನಭಾಗ್ಯ ಅಕ್ಕಿ ಸೇರಿದಂತೆ ವಿವಿಧ ಅಕ್ರಮ ದಂಧೆಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಅಕ್ರಮ ಜಾಲದ ಮೂಲವನ್ನು ಪತ್ತೆಹಚ್ಚಿ, ಅದರಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ವಿರುದ್ಧವೂ ಕಾನೂನು ಕ್ರಮ ಜರುಗಿಸಬೇಕು.
ಪತ್ರಕರ್ತರಿಗೆ ಬೆದರಿಕೆ ಹಾಕುವ ಮೂಲಕ ಅಕ್ರಮಗಳನ್ನು ಮುಚ್ಚಿಹಾಕಲು ಯತ್ನಿಸುವ ಸಮಾಜಘಾತುಕ ಶಕ್ತಿಗಳಿಗೆ ಕಾನೂನಿನ ಮೂಲಕ ಸೂಕ್ತ ಉತ್ತರ ನೀಡಬೇಕು ಎಂದು ಅಶೋಕ ವಾಲಿಕಾರ ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಂಘಟನೆಯ ರಾಜು ತಡಲಗಿ, ಸಂತೋಷ ಕಲಗುಡಿ, ರಾಜು ಕುಮಟಗಿ, ಮಲ್ಲಿಕಾರ್ಜುನ ಗಣಿ, ಅಂಬಣ್ಣ ಗುನ್ನಾಪುರ, ಬಾಬು ಕೋಟಿಗುಂಡಿ, ಅನೀಲ ಪವಾರ, ಅಶೋಕ ವಾಲಿಕಾರ, ಪರಶುರಾಮ ಕುಚಬಾಳ, ಅನೀಲ ಇಕಡೆ, ಅಶೋಕ ಚೋಳಕೆ ಸೇರಿದಂತೆ ಹಲವರು ಉಪಸ್ಥಿತರಿದ್ದರು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande