
ಕೋಲಾರ, ಆಗಸ್ಟ್ (ಹಿ.ಸ.)
ಆ್ಯಂಕರ್ : ಈ ಬಾರಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಶೇಕಡ ಹತ್ತರಷ್ಟು ಮಳೆಯಾಗಿದೆ. ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಶೇಂಗಾ ಸೇರಿದಂತೆ ಇತರೆ ಬೆಳೆಗಳ ಬಿತ್ತನೆಯಾಗಬೇಕಾಗಿತ್ತು. ಆದರೆ ಕೇವಲ ನಾಲ್ಕು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಆದರೆ ಮಳೆಯ ಕೊರತೆಯಿಂದಾಗಿ ಬಿತ್ತಿದ ಬೀಜ ಮೊಳಗೆ ಹೊಡೆದು ಒಣಗಿಹೋಗಿದೆ. ಇದರಿಂದಾಗಿ ಇಡೀ ಕೋಲಾರ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದಾಗಿ ರಾಜ್ಯದ ಒಟ್ಟು ೧೦೧ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಇದರಲ್ಲಿ ೮೯ ತಾಲೂಕುಗಳು ತೀವ್ರ ಬರಪೀಡಿತ ಎಂದು ಮತ್ತು ೧೨ ತಾಲೂಕುಗಳು ಮಧ್ಯಮ ಪ್ರಮಾಣದ ಬರಪೀಡಿತ ಎಂದು ವರ್ಗೀಕರಿಸಲಾಗಿದೆ.
೨೦೨೬ರ ದಕ್ಷಿಣ-ಮಾರುತ ಮಳೆಯಲ್ಲಿ ಉಂಟಾದ ವ್ಯತ್ಯಾಸ ಹಾಗೂ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ಮತ್ತು ಬಿತ್ತನೆ ಕಾರ್ಯಕ್ಕೆ ತೀವ್ರ ಹಿನ್ನಡೆಯಾಗಿದೆ.
'ಬರ ನಿರ್ವಹಣೆ ಕೈಪಿಡಿ-೨೦೨೦'ರ ಮಾರ್ಗಸೂಚಿಗಳ ಅನ್ವಯ ಕೆಎಸ್ಎನ್ಡಿಎಂಸಿ ವೈಜ್ಞಾನಿಕ ಮೌಲ್ಯಮಾಪನ ಹಾಗೂ ತಳಮಟ್ಟದ ಸಮೀಕ್ಷೆ ನಡೆಸಿ ಈ ವರದಿಯನ್ನು ಸಿದ್ಧಪಡಿಸಿದೆ. ಈ ಬರ ಘೋಷಣೆಯು ತಕ್ಷಣದಿಂದ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶ ಅಥವಾ ರದ್ದತಿಯವರೆಗೆ ಆರು ತಿಂಗಳ ಕಾಲ ಜಾರಿಯಲ್ಲಿರುತ್ತದೆ.
ಬರಪೀಡಿತ ತಾಲೂಕುಗಳ ಜಿಲ್ಲಾಧಿಕಾರಿಗಳು ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ಎಸ್ಡಿಆರ್ಎಫ್ ನಿಯಮಾನುಸಾರ ಅಗತ್ಯ ಪರಿಹಾರ ಮತ್ತು ತುರ್ತು ಕ್ರಮಗಳನ್ನು ಕೈಗೊಳ್ಳಲು ಸಂಬ0ಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ರಾಜ್ಯ ಸರ್ಕಾರವು ಬೆಳೆ ಹಾನಿಯ ಜಂಟಿ ಸಮೀಕ್ಷೆಯನ್ನು ಕೂಡಲೇ ನಡೆಸಿ ವರದಿ ಸಲ್ಲಿಸುವಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಆಯುಕ್ತರಿಗೆ ಸೂಚಿಸಿದೆ. ಮುಂಗಾರು ಹಂಗಾಮಿನ ಮಳೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಇತರೆ ತಾಲೂಕುಗಳ ಬಗ್ಗೆಯೂ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.
ಈಗಾಗಲೇ ಕೆರೆ, ಕುಂಟೆಗಳು ಬತ್ತಿ ಹೋಗಿವೆ. ಇದರಿಂದಾಗಿ ಕುಡಿಯಲು ಮತ್ತು ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗಿದೆ. ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಜಾನುವಾರುಗಳಿಗೆ ಮೇವಿನ ಕೊರತೆ ಸಹ ಎದುರಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್