
ಬೆಂಗಳೂರು, 28 ಆಗಸ್ಟ್ (ಹಿ.ಸ.):
ಆ್ಯಂಕರ್:
ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಆ.27ರ ತಡ ರಾತ್ರಿ ಉತ್ತರ ವಿಭಾಗದ 13 ಪೊಲೀಸ್ ಠಾಣೆಗಳ ರೌಡಿ ನಿಗ್ರಹ ಪಡೆ ಹಾಗೂ ಹಿರಿಯ ಅಧಿಕಾರಿಗಳು 121 ರೌಡಿ ಶೀಟರ್ಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಮೂರು ಉಪವಿಭಾಗಗಳ ಸಹಾಯಕ ಪೊಲೀಸ್ ಆಯುಕ್ತರು, 13 ಠಾಣೆಗಳ ಇನ್‌ಸ್ಪೆಕ್ಟರ್‌ಗಳು ಹಾಗೂ ರೌಡಿ ನಿಗ್ರಹ ಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ರೌಡಿ ಶೀಟರ್‌ಗಳ ಪ್ರಸ್ತುತ ಉದ್ಯೋಗ, ದೈನಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು. ಹಿಂದಿನ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುತ್ತಿದ್ದಾರೆಯೇ ಎಂಬುದನ್ನೂ ಪರಿಶೀಲಿಸಲಾಯಿತು.
ನ್ಯಾಯಾಲಯಕ್ಕೆ ಹಾಜರಾಗದವರ ವಿರುದ್ಧ ಬಾಕಿ ಇರುವ ವಾರಂಟ್, ಘೋಷಣೆ ಹಾಗೂ ಎಲ್‌ಪಿಆರ್ ವಿವರಗಳನ್ನು ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.
ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಮಾಧ್ಯಮಗಳಿಗೆ ತಿಳಿಸಿದ್ದಾರೆ
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R