
ವಿಜಯಪುರ, 28 ಆಗಸ್ಟ್ (ಹಿ.ಸ.)
ಆ್ಯಂಕರ್ : ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ವಿವಿಧ ಪ್ರಕರಣಗಳ ಪ್ರಗತಿ ಹಾಗೂ ಮುಂದಿನ ಕ್ರಮಗಳ ಕುರಿತು ಸಮಗ್ರವಾಗಿ ಚರ್ಚಿಸಲು ನವನಗರದ ಕೃ.ಮೇ.ಯೋ. ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.
ಮಹಾ ವ್ಯವಸ್ಥಾಪಕರು (ಪು&ಪು, ಭೂಸ್ವಾಧೀನ, ಕೃ.ಮೇ.ಯೋ., ನವನಗರ–ಬಾಗಲಕೋಟೆ) ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ನ್ಯಾಯಾಲಯದ ವಿವಿಧ ಹಂತಗಳಲ್ಲಿ ಇತ್ಯರ್ಥಗೊಂಡಿರುವ ಪ್ರಕರಣಗಳ ಪ್ರಸ್ತುತ ಸ್ಥಿತಿ, ಕೈಗೊಳ್ಳಬೇಕಾದ ಮುಂದಿನ ಕ್ರಮಗಳು ಹಾಗೂ ಸಂಬಂಧಿಸಿದ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ನ್ಯಾಯಾಲಯದ ತೀರ್ಪುಗಳ ಅನುಷ್ಠಾನ, ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣಗಳ ಪ್ರಗತಿ, ಬಾಕಿ ಇರುವ ಕಾನೂನು ಪ್ರಕ್ರಿಯೆಗಳು ಹಾಗೂ ಇಲಾಖೆಯ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ಹಂಚಿಕೊಂಡರು. ಇತ್ಯರ್ಥಗೊಂಡ ಪ್ರಕರಣಗಳಲ್ಲಿ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವ ಮೂಲಕ ಯೋಜನಾ ಕಾರ್ಯಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮವಹಿಸುವ ಕುರಿತು ಸಭೆಯಲ್ಲಿ ಒತ್ತು ನೀಡಲಾಯಿತು.
ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳು, ಕಾನೂನು ವಿಚಾರಗಳು ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸಮನ್ವಯದಿಂದ ನಿರ್ವಹಿಸುವ ಅಗತ್ಯದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ವಿವಿಧ ವಿಭಾಗಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಪ್ರಕರಣಗಳ ಪ್ರಗತಿಯನ್ನು ಮತ್ತಷ್ಟು ವೇಗಗೊಳಿಸುವ ಕುರಿತು ಸಲಹೆ-ಸೂಚನೆಗಳನ್ನು ನೀಡಲಾಯಿತು.
ಸಭೆಯಲ್ಲಿ ಉಪ ಮಹಾ ವ್ಯವಸ್ಥಾಪಕರು (ಪು&ಪು, ಭೂಸ್ವಾಧೀನ, ಕೃ.ಮೇ.ಯೋ., ನವನಗರ–ಬಾಗಲಕೋಟೆ), ಅಧೀಕ್ಷಕ ಅಭಿಯಂತರರು, ಕೃ.ಮೇ.ಯೋ., ಬಾಗಲಕೋಟೆ ಹಾಗೂ ಮಾನ್ಯ ವಿಶೇಷ ಅಧಿಕಾರಿಗಳು, ಕಾನೂನು ಕೋಶ, ಕೃ.ಮೇ.ಯೋ., ಬಾಗಲಕೋಟೆ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande