
ಕೋಲಾರ: ಆ.೦೩ (ಹಿ.ಸ.):
ಆ್ಯಂಕರ್ : ಆಗಸ್ಟ್ ೧೫ರಂದು ನಡೆಯಲಿರುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ತಾಲೂಕು ಮಟ್ಟದಲ್ಲಿಯೂ ಸಹ ಶಾಸಕರು, ತಹಶೀಲ್ದಾರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ದೇಶನ ನೀಡಿದರು.
ಸ್ವಾತಂತ್ರ್ಯ ದಿನಾಚರಣೆಯ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪೆರೇಡ್ ಸಮಿತಿ, ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸ್ವಾಗತ ಸಮಿತಿ, ಡಿಡಿಪಿಐ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಹಾಗೂ ಆಹಾರ, ವೇದಿಕೆ, ಸ್ವಚ್ಛತಾ ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲರೂ ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಆ.೧೫ರಂದು ಬೆಳಿಗ್ಗೆ ೭ ಗಂಟೆಗೆ ಕ್ಲಾಕ್ ಟವರ್ ಬಳಿ ಹಾಗೂ ೯ ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮತ್ತು ಪೆರೇಡ್ ನಡೆಯಲಿದ್ದು, ಪೊಲೀಸ್, ಎನ್.ಸಿ.ಸಿ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲಾ ಮಕ್ಕಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶಭಕ್ತಿ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ನಾಡಿನ ಸಂಸ್ಕೃತಿಯನ್ನು ಬಿಂಬಿಸುವAತಿರಬೇಕು. ಯಾವುದೇ ಜಾತಿ, ಧರ್ಮ, ಭಾಷೆಗೆ ಧಕ್ಕೆಯಾಗದಂತೆ ಎಚ್ಚರವಹಿಸಿ, ಉತ್ತಮ ಹಾಡುಗಳನ್ನು ಆಯ್ಕೆ ಮಾಡಬೇಕು. ಸಂಜೆ ಟಿ. ಚನ್ನಯ್ಯ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಶಿಷ್ಟಾಚಾರದಂತೆ ಗೌರವಪೂರ್ವಕವಾಗಿ ಸನ್ಮಾನಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕ್ರೀಡಾಂಗಣದಲ್ಲಿ ಸ್ವಚ್ಛತೆ ಕಾಪಾಡಲು ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಕುಡಿಯುವ ನೀರು, ಸಂಚಾರಿ ಶೌಚಾಲಯ, ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ದಳದ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ಧ್ವಜಾರೋಹಣದ ವೇಳೆ ಶಿಷ್ಟಾಚಾರ ಪಾಲಿಸುವುದು ಕಡ್ಡಾಯವಾಗಿದ್ದು, ಪ್ಲಾಸ್ಟಿಕ್ ಧ್ವಜಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜೊತೆಗೆ ಕಡ್ಡಾಯವಾಗಿ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇರಿಸಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಸಿಹಿ ತಿಂಡಿ ವಿತರಿಸಬೇಕು ಹಾಗೂ ಅವರ ಸುರಕ್ಷಿತ ಸಾರಿಗೆ ವ್ಯವಸ್ಥೆಗೆ ಒತ್ತು ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಅಪರ ಜಿಲ್ಲಾಧಿಕಾರಿ ಎಸ್ ಎಂ ಮಂಗಳ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಸಿಕ್ಕಲಿಗರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ. ಕೆ. ರಮೇಶ್, ಉವಿಭಾಗಾಧಿಕಾರಿ ಜಂಬಗಿ ರೇಣುಕಾ ಪ್ರಸಾದ್ ದಿಲೀಪ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್