ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆ ಖಂಡಿಸಿ ಕ್ರಮಕ್ಕೆ ಆಗ್ರಹ: ಆರ್. ಅಶೋಕ
ಬೆಂಗಳೂರು, 30 ಆಗಸ್ಟ್ (ಹಿ.ಸ.): ಆ್ಯಂಕರ್:ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಸನಾತನ ಹಿಂದೂ ಧರ್ಮ ಹಾಗೂ ದೇವಸ್ಥಾನಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಮೌನ ವಹಿಸ
ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆ ಖಂಡಿಸಿ ಕ್ರಮಕ್ಕೆ ಆಗ್ರಹ: ಆರ್. ಅಶೋಕ


ಬೆಂಗಳೂರು, 30 ಆಗಸ್ಟ್ (ಹಿ.ಸ.):

ಆ್ಯಂಕರ್:ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಸನಾತನ ಹಿಂದೂ ಧರ್ಮ ಹಾಗೂ ದೇವಸ್ಥಾನಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ದಿನಬೆಳಗಾದರೆ ದೇವಸ್ಥಾನಗಳಿಗೆ ಭೇಟಿ ನೀಡುವ ನಾಟಕ ಮಾಡುತ್ತಾ, ಕ್ಯಾಮೆರಾ ಮುಂದೆ ಭಕ್ತಿಯ ಪ್ರದರ್ಶನ ನೀಡುವ ಮುಖ್ಯಮಂತ್ರಿ, ತಮ್ಮದೇ ಸಂಪುಟದ ಸಚಿವರು ಹಿಂದೂ ಧರ್ಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದಾಗ ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಮಠ-ಮಂದಿರಗಳಿಗೆ ಹೋಗುವುದಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರಗಳನ್ನು ತುಚ್ಛವಾಗಿ ಬಿಂಬಿಸಲಾಗಿದೆ. ಇತರ ಧರ್ಮಗಳಿಗಿಂತ ಇಸ್ಲಾಂ ಧರ್ಮವೇ ಶ್ರೇಷ್ಠ ಎಂಬ ರೀತಿಯಲ್ಲಿ ಹೇಳಿಕೆ ನೀಡುವ ಮೂಲಕ ಸನಾತನ ಧರ್ಮವನ್ನು ಕೀಳಾಗಿ ಬಿಂಬಿಸಲಾಗಿದೆ ಎಂದು ಅಶೋಕ ಆರೋಪಿಸಿದ್ದಾರೆ.

ಇದೇನಾ ಕಾಂಗ್ರೆಸ್‌ನ ‘ಸರ್ವಧರ್ಮ ಸಮಭಾವ’ ಮತ್ತು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಪ್ರಶ್ನಿಸಿರುವ ಅವರು, ಬಸವರಾಜ ರಾಯರೆಡ್ಡಿ ತಮ್ಮ ಹೇಳಿಕೆಗಳನ್ನು ಹಿಂಪಡೆದು ನಾಡಿನ ಸಮಸ್ತ ಹಿಂದೂಗಳ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರನ್ನು ಸಂಪುಟದಿಂದ ವಜಾಗೊಳಿಸುವ ಬದ್ಧತೆಯನ್ನು ಮುಖ್ಯಮಂತ್ರಿ ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಇಲ್ಲವಾದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೇವಸ್ಥಾನ ಭೇಟಿ ಹಾಗೂ ಹಿಂದೂ ಧರ್ಮದ ಕುರಿತು ಅವರ ಮಾತುಗಳು ಕೇವಲ ಮತಕ್ಕಾಗಿ ನಡೆಸುವ ತೋರಿಕೆಯಾಗಿದೆ ಎಂಬುದು ಸ್ಪಷ್ಟವಾಗಲಿದೆ ಎಂದು ಅಶೋಕ ಟೀಕಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande