
ಬಾಗಲಕೋಟೆ, 05 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ
ಗುಳೇದಗುಡ್ಡ ತಾಲೂಕಿನ ಬೂದನಗಡ ಗ್ರಾಮದ ಜಮೀನಿನಲ್ಲಿ ಬೆಳೆಯಲಾಗಿದ್ದ ಸೂರ್ಯಕಾಂತಿ ಬೆಳೆ ಮಳೆ ಕೊರತೆ ಹಾಗೂ ಪ್ರತಿಕೂಲ ಹವಾಮಾನದಿಂದ ಹಾನಿಗೊಳಗಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ನೂತನ ಸಚಿವ ವಿಜಯಾನಂದ ಕಾಶಪ್ಪನವರ ಬೆಳೆ ಹಾನಿಯನ್ನು ಪರಿಶೀಲಿಸಿದರು.
ಸಚಿವರ ಜೊತೆ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹಾಗೂ ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿ, ಹಾನಿಗೊಳಗಾದ ಸೂರ್ಯಕಾಂತಿ ಬೆಳೆಯ ಸ್ಥಿತಿಯನ್ನು ವೀಕ್ಷಿಸಿದರು. ಈ ವೇಳೆ ರೈತರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಮಾಹಿತಿ ಪಡೆದು, ಬೆಳೆ ನಷ್ಟದಿಂದ ಉಂಟಾಗಿರುವ ಆರ್ಥಿಕ ತೊಂದರೆಗಳನ್ನು ಆಲಿಸಿದರು.
ರೈತರು ಸರ್ಕಾರದಿಂದ ಸೂಕ್ತ ಪರಿಹಾರ, ಬೆಳೆ ನಷ್ಟದ ಸಮಗ್ರ ಸಮೀಕ್ಷೆ ಹಾಗೂ ಶೀಘ್ರ ಪರಿಹಾರಧನ ವಿತರಣೆ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಮತ್ತು ಶಾಸಕರು, ಸಂಬಂಧಿಸಿದ ಅಧಿಕಾರಿಗಳ ಮೂಲಕ ಬೆಳೆ ಹಾನಿಯ ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಬೆಳೆ ಹಾನಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ಸೌಲಭ್ಯಗಳು ಮತ್ತು ಪರಿಹಾರ ಕ್ರಮಗಳು ತ್ವರಿತವಾಗಿ ತಲುಪುವಂತೆ ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಕೃಷಿ ಇಲಾಖೆ ಅಧಿಕಾರಿಗಳು, ರೈತ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande