
ಗದಗ, 05 ಆಗಸ್ಟ್ (ಹಿ.ಸ.)
ಆ್ಯಂಕರ್:- ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಎರಡು ದಿನಗಳ ಜಿಲ್ಲಾ ಪ್ರವಾಸದ ಅಂಗವಾಗಿ ಬುಧವಾರ ಗದಗಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಪೊಲೀಸ್ ಗೌರವ ವಂದನೆಯೊಂದಿಗೆ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು.
ಉಪಲೋಕಾಯುಕ್ತರ ಆಗಮನದ ವೇಳೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ, ಅಪರ ಜಿಲ್ಲಾಧಿಕಾರಿ ಡಾ ಕೆ ಆರ್ ದುರಗೇಶ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿವೈಎಸ್ಪಿಗಳಾದ ಮುರ್ತುಜಾ ಖಾದ್ರಿ ಹಾಗೂ ವಿದ್ಯಾನಂದ ನಾಯ್ಕ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎಸ್.ಜಿ. ಪಲ್ಲೇದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಪ್ರವಾಸದ ಅಂಗವಾಗಿ ಆಗಸ್ಟ್ 6 ಮತ್ತು 7ರಂದು ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಗದಗ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ತಮ್ಮ ಸಮಸ್ಯೆಗಳು, ದೂರುಗಳು ಹಾಗೂ ಆಡಳಿತಾತ್ಮಕ ಅಹವಾಲುಗಳನ್ನು ಉಪಲೋಕಾಯುಕ್ತರ ಮುಂದೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಇದರ ಜೊತೆಗೆ, ಲೋಕಾಯುಕ್ತ ಸಂಸ್ಥೆಯಲ್ಲಿ ಈಗಾಗಲೇ ದಾಖಲಾಗಿರುವ ವಿವಿಧ ಪ್ರಕರಣಗಳ ವಿಚಾರಣೆಯನ್ನು ಸಹ ಅವರು ನಡೆಸಲಿದ್ದು, ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಪಡೆದು ಪ್ರಕರಣಗಳ ಪ್ರಗತಿ ಪರಿಶೀಲಿಸಲಿದ್ದಾರೆ.
ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮಾರ್ಗದರ್ಶನ ನೀಡುವ ನಿರೀಕ್ಷೆಯಿದೆ.
ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸುವರು, ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಿದ್ದಾರೆ.
ಉಪಲೋಕಾಯುಕ್ತರ ಜಿಲ್ಲಾ ಭೇಟಿ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಸಾರ್ವಜನಿಕ ಅಹವಾಲುಗಳ ಸ್ವೀಕಾರ ಹಾಗೂ ಪ್ರಕರಣಗಳ ವಿಚಾರಣೆ ಸುಗಮವಾಗಿ ನಡೆಯಲು ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಭೇಟಿ ಸಾರ್ವಜನಿಕರ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಜನವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP