
ವಿಜಯಪುರ, 05 ಆಗಸ್ಟ್ (ಹಿ.ಸ.)
ಆ್ಯಂಕರ್ : ವಿಜಯಪುರ ತಾಲೂಕಿನ ಕವಲಗಿ ಗ್ರಾಮದಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ಅಡಚಣೆಯಾಗಿರುವ ರಸ್ತೆ ಸಮಸ್ಯೆಯನ್ನು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮಸ್ಥರಿಂದ ಸಮಸ್ಯೆಯ ಸಂಪೂರ್ಣ ಮಾಹಿತಿ ಪಡೆದು, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಪರಿಶೀಲನೆ ವೇಳೆ ರಸ್ತೆ ಜಾಗದ ಮೇಲಿನ ಒತ್ತುವರಿಯಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದರು. ಸಮಸ್ಯೆಯ ಗಂಭೀರತೆಯನ್ನು ಅರಿತ ಉಪ ಕಾರ್ಯದರ್ಶಿಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ಒತ್ತುವರಿ ತೆರವು ಕಾರ್ಯವನ್ನು ಯಾವುದೇ ವಿಳಂಬವಿಲ್ಲದೆ ಆರಂಭಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂಬಂಧ ತಹಶೀಲ್ದಾರರಿಗೆ ತುರ್ತು ಪತ್ರ ಬರೆದು ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಆಡಳಿತದ ಮೇಲೆ ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ರೀತಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಪ್ರಕಾಶ ವಡ್ಡರ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸ್ಥಳ ಪರಿಶೀಲನೆಯ ವೇಳೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ರಸ್ತೆ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಮನವಿ ಸಲ್ಲಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande