
ಹುಬ್ಬಳ್ಳಿ, 09 ಆಗಸ್ಟ್ (ಹಿ.ಸ.):
ಆ್ಯಂಕರ್:
ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್, ಆದಿವಾಸಿ ಹರಣಶಿಕಾರಿ ಪಾರ್ಟಿ ಸಮಾಜ ಕ್ಷೇಮಾಭಿವೃದ್ಧಿ ಸಂಘ, ಸೆಟ್ಲ್‌ಮೆಂಟ್ ಕಾಲನಿ ಹಾಗೂ ಸಮಸ್ತ ಕರ್ನಾಟಕ ಆದಿವಾಸಿ ಸಮುದಾಯಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 32ನೇ ವಿಶ್ವ ಆದಿವಾಸಿ ದಿನಾಚರಣೆ ಹಾಗೂ ಆದಿವಾಸಿಗಳ ಕಲಾಮೇಳ ಕಾರ್ಯಕ್ರಮವನ್ನು ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ 2011ರಿಂದ ನಿರಂತರವಾಗಿ ವಿಶ್ವ ಆದಿವಾಸಿ ದಿನಾಚರಣೆ ಆಚರಿಸುವ ಮೂಲಕ ರಾಜ್ಯದ ಮೂಲ ಆದಿವಾಸಿ ಸಮುದಾಯಗಳ ಹಕ್ಕುಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ಅಗತ್ಯತೆಗಳ ಕುರಿತು ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಆದಿವಾಸಿ ದಾದಿಯರು ಹಾಗೂ ಸೂಲಗಿತ್ತಿಯರನ್ನು ಗೌರವಿಸಲಾಯಿತು. ಇದೇ ವೇಳೆ ಆದಿವಾಸಿ ಸಮುದಾಯಗಳ ಸಾಂಪ್ರದಾಯಿಕ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪರಿಚಯಿಸುವ ಆದಿವಾಸಿಗಳ ಕಲಾಮೇಳ ಗಮನ ಸೆಳೆಯಿತು.
ಆದಿವಾಸಿಗಳ ವಿಶಿಷ್ಟ ಸಂಸ್ಕೃತಿ, ಪರಂಪರೆ ಮತ್ತು ಜೀವನಮೌಲ್ಯಗಳನ್ನು ಗೌರವಿಸುವುದರ ಜೊತೆಗೆ ಅವರ ಹಕ್ಕುಗಳ ರಕ್ಷಣೆ ಹಾಗೂ ಸಬಲೀಕರಣಕ್ಕೆ ಸರ್ಕಾರದ ಬೆಂಬಲ ಸದಾ ಇರಲಿದೆ ಎಂದು ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ರುದ್ರಪ್ಪ ಲಮಾಣಿ, ಶಾಸಕ ಎನ್.ಎಚ್. ಕೋನರೆಡ್ಡಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.