
ಬೆಂಗಳೂರು, 09 ಆಗಸ್ಟ್ (ಹಿ.ಸ.):
ಆ್ಯಂಕರ್:ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯ 84ನೇ ವರ್ಷಾಚರಣೆ ಅಂಗವಾಗಿ ನಡೆದ ತಿರಂಗಾ ಯಾತ್ರೆಯ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಾತನಾಡಿದರು.
ಆಗಸ್ಟ್ 9 ಭಾರತದ ಇತಿಹಾಸದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾಗಿದೆ. ಮಹಾತ್ಮ ಗಾಂಧೀಜಿ ಅವರ ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಘೋಷಣೆ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಶಕ್ತಿ ನೀಡಿತು. ಈ ಹೋರಾಟದಲ್ಲಿ ಭಾಗವಹಿಸಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಶತಕೋಟಿ ನಮನ ಸಲ್ಲಿಸುತ್ತೇನೆ ಎಂದರು.
ಸ್ವಾತಂತ್ರ್ಯಕ್ಕಾಗಿ ನಡೆದ ಅಸಹಕಾರ ಚಳುವಳಿ, ಉಪ್ಪಿನ ಸತ್ಯಾಗ್ರಹ ಹಾಗೂ ಕ್ವಿಟ್ ಇಂಡಿಯಾ ಚಳುವಳಿಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಅಗತ್ಯ. 1942ರ ಆಗಸ್ಟ್ 8ರಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕ್ವಿಟ್ ಇಂಡಿಯಾ ನಿರ್ಣಯ ಅಂಗೀಕರಿಸಿತ್ತು. ಗಾಂಧೀಜಿ ಅವರ ‘ಮಾಡು ಇಲ್ಲವೇ ಮಡಿ’ ಕರೆ ದೇಶದ ಜನರಲ್ಲಿ ಹೋರಾಟದ ಕಿಚ್ಚು ಹೊತ್ತಿಸಿತು ಎಂದು ಹೇಳಿದರು.
ಕಾಂಗ್ರೆಸ್ ರಾಜಕೀಯ ಪಕ್ಷ ಮಾತ್ರವಲ್ಲ, ಅದು ಒಂದು ಚಳುವಳಿ ಎಂದು ಬಣ್ಣಿಸಿದ ಹರಿಪ್ರಸಾದ್, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ನಾಯಕರ ಹಾಗೂ ಕಾರ್ಯಕರ್ತರ ತ್ಯಾಗವನ್ನು ಸ್ಮರಿಸಿದರು. ಶಿವಮೊಗ್ಗದ ಈಸೂರಿನಲ್ಲಿ ತ್ರಿವರ್ಣ ಧ್ವಜ ಹಾರಿಸಿ ಬ್ರಿಟಿಷರಿಗೆ ಸೆಡ್ಡು ಹೊಡೆದ ಇತಿಹಾಸವನ್ನು ಉಲ್ಲೇಖಿಸಿದರು.
ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಆ ಸಂಘಟನೆಗಳ ಪಾತ್ರದ ಕುರಿತು ಪ್ರಶ್ನೆಗಳನ್ನು ಎತ್ತಿದರು. ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಅವರು 1942ರಲ್ಲಿ ಬಂಗಾಳದಲ್ಲಿ ಮುಸ್ಲಿಂ ಲೀಗ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದರು ಎಂದು ಆರೋಪಿಸಿದರು. ಇದೇ ವೇಳೆ, ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಸರಿಯಾದ ರೀತಿಯಲ್ಲಿ ತಿಳಿಸುವ ಅಗತ್ಯವಿದೆ ಎಂದರು.
ಎಸ್‌ಐಆರ್ ಮೂಲಕ ಮತದಾರರ ಹಕ್ಕು ಕಸಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಹರಿಪ್ರಸಾದ್, ಕಾಂಗ್ರೆಸ್ ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಜಾಗೃತರಾಗಿ ನೈಜ ಮತದಾರರು ಮತಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.
ಸಾಮಾಜಿಕ ನ್ಯಾಯ, ಸಮಾನತೆ, ಬಡವರು ಹಾಗೂ ದುರ್ಬಲರಿಗೆ ಶಕ್ತಿ ನೀಡುವುದು ಮತ್ತು ಧರ್ಮದ ಹೆಸರಿನಲ್ಲಿ ದೇಶ ವಿಭಜನೆಯಾಗದಂತೆ ನೋಡಿಕೊಳ್ಳುವುದು ಸ್ವಾತಂತ್ರ್ಯ ಹೋರಾಟಗಾರರ ಆಶಯವಾಗಿತ್ತು. ಈ ಆಶಯಗಳನ್ನು ರಕ್ಷಿಸುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ ಎಂದರು.
ಗಾಂಧೀಜಿ ಹಾಗೂ ನೆಹರೂ ಅವರ ವಿಚಾರಧಾರೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿಂದುತ್ವದ ಹೆಸರಿನಲ್ಲಿ ನಡೆಯುವ ರಾಜಕೀಯವನ್ನು ಟೀಕಿಸಿದರು. ವೀರ ಸಾವರ್ಕರ್ ಅವರ ವಿಚಾರಗಳ ಬಗ್ಗೆಯೂ ಹೇಳಿಕೆ ನೀಡಿದ ಅವರು, ಅವರ ಕುರಿತಾದ ಚರ್ಚೆಗಳು ಇತಿಹಾಸದ ವಾಸ್ತವಾಂಶಗಳ ಆಧಾರದ ಮೇಲೆ ನಡೆಯಬೇಕು ಎಂದರು.
ತುರ್ತು ಪರಿಸ್ಥಿತಿ ವಿಚಾರದಲ್ಲೂ ಬಿಜೆಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವ ಬಗ್ಗೆ ಮಾತನಾಡುವವರು ದೇಶದ ಇತಿಹಾಸವನ್ನೂ ಸಮಗ್ರವಾಗಿ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.
“ಸಂವಿಧಾನ, ತ್ರಿವರ್ಣ ಧ್ವಜ, ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತ ತತ್ವಗಳನ್ನು ರಕ್ಷಿಸಲು ಗಾಂಧೀಜಿ ಅವರ ಸತ್ಯ ಮತ್ತು ಅಹಿಂಸೆಯ ಮಾರ್ಗದಲ್ಲಿ ಹೋರಾಟ ನಡೆಸಬೇಕು” ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.