
ಬೆಂಗಳೂರು, 12 ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ನಗರದ ವಿವಿಧ ಭಾಗಗಳ 917 ಸ್ಥಳಗಳಲ್ಲಿ ದಿಢೀರ್ ತಪಾಸಣೆ ನಡೆಸಿ 71ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಖಾನೆಗಳು, ಅಂಗಡಿಗಳು, ಹೋಟೆಲ್ಗಳು ಸೇರಿದಂತೆ ವಿವಿಧ ವಾಣಿಜ್ಯ ಸ್ಥಳಗಳಲ್ಲಿ ಅಪ್ರಾಪ್ತ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಕಾರ್ಯಾಚರಣೆ ನಡೆಸಲಾಯಿತು.
ದಾಳಿಯ ವೇಳೆ ಪತ್ತೆಯಾದ ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಿ, ಅವರ ಪೋಷಕರು ಹಾಗೂ ಸಂಬಂಧಪಟ್ಟ ಇಲಾಖೆಗಳ ಮೂಲಕ ಮುಂದಿನ ಕ್ರಮ ಕೈಗೊಳ್ಳಲಾಗಿದೆ.ಬಾಲ ಕಾರ್ಮಿಕರನ್ನು ನೇಮಿಸಿಕೊಂಡಿರುವುದು ಕಂಡುಬಂದ ಸ್ಥಳಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ.
ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಪೊಲೀಸ್ ಅಧಿಕಾರಿಗಳ ಹೇಳಿಕೆ: “ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ನಿರಂತರ ತಪಾಸಣೆ ಮತ್ತು ದಾಳಿ ನಡೆಸಲಾಗುತ್ತಿದೆ.
ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಕ್ಷಿಸಲ್ಪಟ್ಟ ಮಕ್ಕಳಿಗೆ ಅಗತ್ಯ ರಕ್ಷಣೆ ಮತ್ತು ಪುನರ್ವಸತಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲೂ ನಡೆದ ಕಾರ್ಯಾಚರಣೆಯಲ್ಲಿ ಅಪ್ರಾಪ್ತರನ್ನು ರಕ್ಷಿಸಲಾಗಿದ್ದು, ಬಾಲ ಕಾರ್ಮಿಕ ನಿಯಮ ಉಲ್ಲಂಘನೆ ಸಂಬಂಧ ಪ್ರಕರಣಗಳು ದಾಖಲಾಗಿದ್ದವು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R