ಎಲ್ಲರ ವಿಶ್ವಾಸ ಪಡೆದು ಮಂಡ್ಯದಲ್ಲಿ ಕಾಂಗ್ರೆಸ್ ಸಂಘಟನೆ ಬಲಪಡಿಸುತ್ತೇನೆ: ಕುಮಾರ್ ಕೊಪ್ಪ
ಕಾಂಗ್ರೆಸ್ ಸಂಘಟನೆ ಬಲಪಡಿಸುತ್ತೇನೆ: ಕುಮಾರ್ ಕೊಪ್ಪ
Kumar Koppa Says He Will Strengthen Congress Organisation in Mandya District


ಮಂಡ್ಯ, 12 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಎಐಸಿಸಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ತಮ್ಮನ್ನು ಆಯ್ಕೆ ಮಾಡಿದ್ದು, ಜಿಲ್ಲೆಯ ಶಾಸಕರು, ಸಚಿವರು ಹಾಗೂ ಮುಖ್ಯಮಂತ್ರಿ ಅವರ ಶಿಫಾರಸ್ಸಿನ ಮೇರೆಗೆ ಈ ಜವಾಬ್ದಾರಿ ದೊರೆತಿದೆ ಎಂದು ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕುಮಾರ್ ಕೊಪ್ಪ ಹೇಳಿದರು.

ಮಂಡ್ಯದ ಕೊಪ್ಪದಲ್ಲಿ ಮಾತನಾಡಿದ ಅವರು, ಪಕ್ಷದ ಮುಂದೆ ಹಲವು ಸವಾಲುಗಳಿದ್ದು, ಜಿಲ್ಲಾ ಅಧ್ಯಕ್ಷರ ಹುದ್ದೆ ಸುಲಭದ ಜವಾಬ್ದಾರಿಯಲ್ಲ. ಮುಂದಿನ ದಿನಗಳಲ್ಲಿ ಹಲವು ಚುನಾವಣೆಗಳು ಎದುರಾಗಲಿರುವ ಹಿನ್ನೆಲೆಯಲ್ಲಿ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದರು.

“ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಮುನ್ನುಗ್ಗುತ್ತೇನೆ. ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ,” ಎಂದು ಕುಮಾರ್ ಕೊಪ್ಪ ಹೇಳಿದರು.

1990ರಿಂದಲೇ ಸಕ್ರಿಯವಾಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವಿದೆ. ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಲವರು ಆಕಾಂಕ್ಷಿಗಳಾಗಿದ್ದರು. ಆದರೆ, ಅವಕಾಶ ದೊರೆಯದ ಕಾರಣ ಕೆಲವರಿಗೆ ನಿರಾಶೆಯಾಗಿರಬಹುದು.

ಅಂತಹ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಸಂಘಟನಾತ್ಮಕವಾಗಿ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದರು.

ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸುವುದು, ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಎಲ್ಲ ಮುಖಂಡರ ಸಹಕಾರದೊಂದಿಗೆ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ ನೀಡುವುದು ತಮ್ಮ ಉದ್ದೇಶವಾಗಿದೆ ಎಂದು ಕುಮಾರ್ ಕೊಪ್ಪ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande