ವಿಬಿ-ಜಿ ರಾಮ್-ಜಿ ಯೋಜನೆಯಡಿ ಜಲ ಸಂರಕ್ಷಣಾ ಕಾಮಗಾರಿಗಳಿಗೆ ಆಧ್ಯತೆ ನೀಡಲು ಜಿಲ್ಲಾಧಿಕಾರಿಗಳ ಸೂಚನೆ
ವಿಬಿ-ಜಿ ರಾಮ್-ಜಿ ಯೋಜನೆಯಡಿ ಜಲ ಸಂರಕ್ಷಣಾ ಕಾಮಗಾರಿಗಳಿಗೆ ಆಧ್ಯತೆ ನೀಡಲು ಜಿಲ್ಲಾಧಿಕಾರಿಗಳ ಸೂಚನೆ
ಕೋಲಾರ ತಾಲ್ಲೂಕಿನ ವೇಮಗಲ್ನಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ವಿ.ಬಿಜಿ ರಾಮ್ಜಿ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ಕೋಲಾರ,12 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್ : ಬರ ಪರಿಸ್ಥಿತಿಯನ್ನು ಎದುರಿಸಲು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜಲ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಜಲ ಸಂರಕ್ಷಣಾ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ವ್ಯಾಪಕವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಕೋಲಾರ ತಾಲೂಕಿನ ವೇಮಗಲ್ನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ತೆರೆಯಲಾಗಿದ್ದ ವಿಬಿ-ಜಿ ರಾಮ್-ಜಿ ಮಾಹಿತಿ ಕೇಂದ್ರವನ್ನು ವಿಧಾನಸಭಾ ಸದಸ್ಯರಾದ ಡಾ. ಕೊತ್ತೂರು ಜಿ. ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಎಂ ಎಲ್ ಅನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ ಉದ್ಘಾಟಿಸಿದರು.

ನಂತರ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ವಿಬಿ-ಜಿ ರಾಮ್-ಜಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಹಾಗೂ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಕುರಿತು ಸಿಬ್ಬಂದಿಯಿ0ದ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಶಾಸಕರಿಗೂ ಯೋಜನೆಯ ಪ್ರಮುಖ ಅಂಶಗಳು ಹಾಗೂ ಗ್ರಾಮೀಣ ಜನರಿಗೆ ದೊರೆಯುವ ಪ್ರಯೋಜನಗಳ ಕುರಿತು ವಿವರಿಸಿದರು.

ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಜಲ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೆರೆ-ಕಟ್ಟೆಗಳ ಅಭಿವೃದ್ಧಿ, ಚೆಕ್ಡ್ಯಾಂ, ಗೋಕಟ್ಟೆ, ಕಾಲುವೆಗಳ ಪುನರುಜ್ಜೀವನ, ಬೋರ್ವೆಲ್ ರೀಚಾರ್ಜ್ ಪಿಟ್ಗಳ ನಿರ್ಮಾಣ ಸೇರಿದಂತೆ ಮಳೆ ನೀರು ಸಂಗ್ರಹ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಕಾಮಗಾರಿಗಳನ್ನು ವ್ಯಾಪಕವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ವಿಬಿ-ಜಿ ರಾಮ್-ಜಿ ಯೋಜನೆಯ ಉದ್ದೇಶ, ಸೌಲಭ್ಯಗಳು ಹಾಗೂ ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳ ಕುರಿತು ಪ್ರತಿ ಮನೆಗೂ ಮಾಹಿತಿ ತಲುಪಿಸುವಂತೆ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅಗತ್ಯ ಜಾಗೃತಿ ಮೂಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ ಎಂ ಮಂಜುನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಹಾಗೂ ತಾಂತ್ರಿಕ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande