
ಬೆಂಗಳೂರು, 13 ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪರಿಸರ ಕಾಳಜಿ ಮೆರೆದಿರುವ ಶಾಸಕ ಕೆ. ಗೋಪಾಲಯ್ಯ ಅವರು ತಮ್ಮ ಗೃಹ ಕಚೇರಿ ಹಾಗೂ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ವಿಗ್ರಹಗಳನ್ನು ವಿತರಿಸಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಸಾವಿರಾರು ಭಕ್ತರು ಹಾಗೂ ಸಾರ್ವಜನಿಕರಿಗೆ ಮಣ್ಣಿನ ಗಣಪತಿ ಮೂರ್ತಿಗಳನ್ನು ವಿತರಿಸಿ, ಹಬ್ಬದ ಶುಭಾಶಯ ಕೋರಿದರು.
ರಾಸಾಯನಿಕ ಬಣ್ಣ ಹಾಗೂ ಪಿಒಪಿ ಬಳಕೆಯ ಗಣಪತಿ ಮೂರ್ತಿಗಳ ಬದಲಿಗೆ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ. ಗೋಪಾಲಯ್ಯ, ಪರಿಸರ ಮಾಲಿನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸುವ ಜತೆಗೆ ಪರಿಸರ ಸಂರಕ್ಷಣೆಯ ಬಗ್ಗೆಯೂ ಜನರು ಕಾಳಜಿ ವಹಿಸಬೇಕು. ಮಣ್ಣಿನ ಗಣಪತಿ ಮೂರ್ತಿಗಳನ್ನು ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಸಾರ್ವಜನಿಕರಿಗೆ ಗಣಪತಿ ಮೂರ್ತಿಗಳ ವಿತರಣೆಗೆ ಸಹಕರಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R