
ಕೋಲಾರ, 14 ಸೆಪ್ಟೆಂಬರ್ (ಹಿ.ಸ)
ಆ್ಯಂಕರ್ : ರೈತರು ಹಾಗೂ ಜನಸಾಮಾನ್ಯರ ವಿವಿಧ ಸಮಸ್ಯೆಗಳಿಗೆ ಶೀಘ್ರವಾಗಿ ಮತ್ತು ನ್ಯಾಯಬದ್ಧವಾಗಿ ಪರಿಹಾರ ಕಲ್ಪಿಸಬೇಕೆಂದು ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತಮುಖಂಡ ಕಲ್ವಮಂಜಲಿ ರಾಮುಶಿವಣ್ಣ ಒತ್ತಾಯಿಸಿದ್ದಾರೆ.
ಗಣಿ ಇಲಾಖೆ, ಶಿಕ್ಷಣ ಇಲಾಖೆ, ಕಂದಾಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆಹಾರ ಇಲಾಖೆ, ಪಿಡಬ್ಲ್ಯೂಡಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೇಷ್ಮೆ ಇಲಾಖೆ ಸೇರಿದಂತೆ ವೇಮಗಲ್–ಕುರುಗಲ್ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮನವಿ ಪತ್ರಗಳನ್ನು ಸಲ್ಲಿಸಲಾಯಿತು.
ರೈತ ಸಂಘಟನೆ ವತಿಯಿಂದ ಪ್ರತಿಯೊಂದು ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರತ್ಯೇಕವಾಗಿ ಶಾಸಕರ ಗಮನಕ್ಕೆ ತರಲಾಯಿತು. ರೈತರ ಜಮೀನು, ಕೃಷಿ, ಮೂಲಸೌಕರ್ಯ, ಸಾರ್ವಜನಿಕ ಸೌಲಭ್ಯಗಳು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಮನವಿ ಮಾಡಲಾಯಿತು.
ಮನವಿ ಪತ್ರಗಳನ್ನು ಸ್ವೀಕರಿಸಿದ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರು ಪ್ರತಿಯೊಂದು ಮನವಿ ಪತ್ರಕ್ಕೂ ಸಹಿ ಮಾಡಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಲುಪಿಸುವ ಕ್ರಮ ಕೈಗೊಂಡರು. ಅಲ್ಲದೆ, ಕಾರ್ಯಕ್ರಮದಲ್ಲಿ ರೈತ ಸಂಘಟನೆ ಹಾಗೂ ಸಾರ್ವಜನಿಕರು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಪರಿಶೀಲಿಸಿ, ಶೀಘ್ರವಾಗಿ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ರೈತಮುಖಂಡ ಕಲ್ವಮಂಜಲಿ ರಾಮುಶಿವಣ್ಣ ಮಾತನಾಡಿ ಸರ್ಕಾರಿ ಇಲಾಖೆಗಳ ಕಚೇರಿಗಳಿಗೆ ಜನರು ಪದೇ ಪದೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ರೈತರು ಮತ್ತು ಜನಸಾಮಾನ್ಯರು ನೀಡುವ ಮನವಿಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಕಾನೂನುಬದ್ಧವಾಗಿ ಹಾಗೂ ನ್ಯಾಯಯುತವಾಗಿ ಪರಿಹರಿಸಬೇಕು. ಪ್ರಜಾ ಸೇವಾ ಆಂದೋಲನದ ಮೂಲಕ ಜನರ ಸಮಸ್ಯೆಗಳನ್ನು ನೇರವಾಗಿ ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್