
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್: ಕಾರ್ಮಿಕ ಆಯುಕ್ತರು ಹಾಗೂ ಪೊಲೀಸ್ ಇಲಾಖೆಯ ನಿರ್ದೇಶನದ ಮೇರೆಗೆ, ಜಿಲ್ಲೆಯಾದ್ಯಂತ ಏಕಕಾಲಕ್ಕೆ ವಿವಿಧ ತಾಲೂಕುಗಳಲ್ಲಿ ದಿಢೀರ್ ತಪಾಸಣೆ ನಡೆಸಿ, ವಿವಿಧ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದ ಒಟ್ಟು 20 ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಮತ್ತು ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರಚಿಸಲಾದ ಟಾಸ್ಕ್ ಫೋರ್ಸ್ ಸಮಿತಿ ತಂಡವು ಭಾನುವಾರ ಜಿಲ್ಲೆಯ ವಿವಿಧೆಡೆ ಆಕಸ್ಮಿಕ ದಾಳಿ ನಡೆಸಿತು.
ತಪಾಸಣೆಯ ವೇಳೆ ವಿವಿಧ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದ ಮಕ್ಕಳನ್ನು ಗುರುತಿಸಿ ರಕ್ಷಿಸಲಾಯಿತು. ಬಳ್ಳಾರಿ- 14 ಮಕ್ಕಳು, ಕುರುಗೋಡು- 3 ಮಕ್ಕಳು, ಸಿರುಗುಪ್ಪ- 2 ಮಕ್ಕಳು, ಸಂಡೂರು- 1 ಮಗು ಸೇರಿ ಒಟ್ಟು 20 ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಈ ಎಲ್ಲಾ ಮಕ್ಕಳನ್ನು ತಾತ್ಕಾಲಿಕವಾಗಿ ಬಾಲಕರ ಬಾಲಮಂದಿರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.
ರಕ್ಷಿಸಲ್ಪಟ್ಟ ಮಕ್ಕಳ ದಾಖಲಾತಿಗಳನ್ನು ಪರಿಶೀಲಿಸಿ, ಮಕ್ಕಳನ್ನು ದುಡಿಮೆಗೆ ನೇಮಿಸಿಕೊಂಡಿದ್ದ ಉದ್ದಿಮೆ ಮಾಲೀಕರ ವಿರುದ್ಧ ಕಾಯ್ದೆಯನ್ವಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮೌನೇಶ್ ತಿಳಿಸಿದ್ದಾರೆ.
ಕಾರ್ಯಾಚರಣೆಯ ಸಂದರ್ಭದಲ್ಲಿ ಅಂಗಡಿ, ಹೋಟೆಲ್ ಹಾಗೂ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಮತ್ತು ಪೋಸ್ಟರ್ಗಳನ್ನು ವಿತರಿಸಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕುರಿತು ಅರಿವು ಮೂಡಿಸಲಾಯಿತು.
ಈ ಜಂಟಿ ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ರಮೇಶ್, ಪರಶುರಾಮ್, ತಿರುಮಲೇಶ್, ಮಂಜುನಾಥ್, ರೀಚ್ ಸ್ವಯಂ ಸೇವಾ ಸಂಸ್ಥೆಯ ಬಸಮ್ಮ, ಹನುಮಂತಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ತಿಕ್, ಅರುಳ್, ಮಕ್ಕಳ ಸಹಾಯವಾಣಿಯ ಜಿಲ್ಲಾ ಸಂಯೋಜಕ ಆನಂದ್, ಸಿಬ್ಬಂದಿಗಳಾದ ಚಂದ್ರಕಲಾ, ಸುಶೀಲ, ಪ್ಯಾರಾ ಲೀಗಲ್ ಸ್ವಯಂ ಸೇವಕಿ ಲಕ್ಷಿ ಹಾಗೂ ಆಯಾ ಠಾಣೆಗಳ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್