
ಮಂಡ್ಯ, 15 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಪ್ರತಿಯೊಬ್ಬರಿಗೂ ಸಮಾನ ಹಕ್ಕು, ನ್ಯಾಯ, ಸ್ವಾತಂತ್ರ್ಯ ಹಾಗೂ ಗೌರವ ಒದಗಿಸುವ ವ್ಯವಸ್ಥೆಯೇ ಪ್ರಜಾಪ್ರಭುತ್ವ. ಅದರ ಮೌಲ್ಯಗಳನ್ನು ಯುವಜನರು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಂಡ್ಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವವು ಕೇವಲ ಆಡಳಿತ ವ್ಯವಸ್ಥೆಯಲ್ಲ. ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ್ಯ, ಸಮಾನತೆ ಮತ್ತು ಗೌರವವನ್ನು ಸಂರಕ್ಷಿಸುವ ವ್ಯವಸ್ಥೆಯಾಗಿದೆ. ಈ ಮೌಲ್ಯಗಳನ್ನು ನಮಗೆ ನೀಡಿರುವ ಸಂವಿಧಾನವನ್ನು ಗೌರವಿಸಿ, ಅದರ ಆಶಯಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಚಿವರು ಹೇಳಿದರು.
ಸಂವಿಧಾನವು ಕೇವಲ ಪಠ್ಯಪುಸ್ತಕದ ವಿಷಯವಾಗದೆ ವಿದ್ಯಾರ್ಥಿಗಳ ಜೀವನದ ಭಾಗವಾಗಬೇಕು. ಇಂದಿನ ಮಕ್ಕಳು ನಾಳಿನ ದೇಶದ ನಾಯಕರು. ಅವರಲ್ಲಿ ಸಂವಿಧಾನ ಪ್ರಜ್ಞೆ, ಸಾಮಾಜಿಕ ಜವಾಬ್ದಾರಿ, ಸಮಾನತೆಯ ಮನೋಭಾವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಎಲ್ಲರೂ ಸಂವಿಧಾನದ ಆಶಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ನಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮೂಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಸೇರಿದಂತೆ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R