
ಬಾಗಲಕೋಟೆ, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದಲ್ಲಿ ನಾಳೆ (ಶನಿವಾರ) ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರ ಅಧ್ಯಕ್ಷತೆಯಲ್ಲಿ ‘ಪ್ರಜಾಸೇವೆ ಅಭಿಯಾನ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಕ್ಷೇತ್ರದ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.
ಅಭಿಯಾನದಲ್ಲಿ ಕೆರೂರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ಕುಂದುಕೊರತೆಗಳು, ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು, ವಿವಿಧ ಸರ್ಕಾರಿ ಸೌಲಭ್ಯಗಳ ಕುರಿತು ಇರುವ ಅಹವಾಲುಗಳು ಸೇರಿದಂತೆ ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ.
ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುತ್, ಆರೋಗ್ಯ, ಶಿಕ್ಷಣ, ಕಂದಾಯ, ಪಿಂಚಣಿ, ಕೃಷಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವ ಸಾಧ್ಯತೆ ಇದೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ.
ಕ್ಷೇತ್ರದ ಜನಪ್ರತಿನಿಧಿಯಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ದಾಖಲಿಸಿಕೊಳ್ಳುವಂತೆ ತಾಲೂಕು ಆಡಳಿತ ಮನವಿ ಮಾಡಿದೆ.
ಪ್ರಜಾಸೇವೆ ಅಭಿಯಾನದ ಮೂಲಕ ಸಾರ್ವಜನಿಕರು ಹಾಗೂ ಆಡಳಿತ ವ್ಯವಸ್ಥೆಯ ನಡುವಿನ ಸಂಪರ್ಕ ಮತ್ತಷ್ಟು ಬಲಪಡಿಸುವ ನಿರೀಕ್ಷೆ ವ್ಯಕ್ತವಾಗಿದೆ. ಜನರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಸೂಚಿಸುವ ನಿರೀಕ್ಷೆಯಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande