
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚುವರಿ ಪ್ರಯಾಣ ದರ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ಗಳ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಸೆಪ್ಟೆಂಬರ್ 11ರಿಂದ 15ರವರೆಗೆ ಐದು ದಿನಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಅಂತಾರಾಜ್ಯ ಸೇರಿದಂತೆ ಒಟ್ಟು 14,987 ಖಾಸಗಿ ಬಸ್ಗಳನ್ನು ಪರಿಶೀಲಿಸಲಾಗಿದ್ದು, 3,756 ಪ್ರಕರಣಗಳನ್ನು ದಾಖಲಿಸಲಾಗಿದೆ.
ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 33 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು ₹73.6 ಲಕ್ಷ ವಸೂಲಿ ಮಾಡಲಾಗಿದ್ದು, ಇದರಲ್ಲಿ ₹40.3 ಲಕ್ಷ ದಂಡದ ಮೊತ್ತವಾಗಿದೆ.ಪರವಾನಗಿ ನಿಯಮ ಉಲ್ಲಂಘನೆ, ನಿಗದಿತ ದರಕ್ಕಿಂತ ಹೆಚ್ಚಿನ ಪ್ರಯಾಣ ದರ ವಸೂಲಿ, ತೆರಿಗೆ ಪಾವತಿಯಲ್ಲಿ ಲೋಪ ಸೇರಿದಂತೆ ವಿವಿಧ ಅಕ್ರಮಗಳು ತಪಾಸಣೆ ವೇಳೆ ಪತ್ತೆಯಾಗಿವೆ. ಕೆಲವು ಬಸ್ಗಳಲ್ಲಿ ಪ್ರಯಾಣಿಕರ ಲಗೇಜ್ ಸಾಗಣೆಯಲ್ಲಿಯೂ ನಿಯಮ ಉಲ್ಲಂಘನೆ ಕಂಡುಬಂದಿದೆ.
ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ಗಳ ಪ್ರಯಾಣ ದರ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಕೆಲ ಪ್ರಯಾಣಿಕರಿಂದ ಸಾವಿರಾರು ರೂಪಾಯಿ ಹೆಚ್ಚುವರಿ ದರ ವಸೂಲಿ ಮಾಡಿರುವ ಪ್ರಕರಣಗಳೂ ವರದಿಯಾಗಿದ್ದವು.
ಈ ಕುರಿತು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ (ಜಾರಿ ವಿಭಾಗ) ಎಂ.ಪಿ. ಓಂಕಾರೇಶ್ವರಿ ಮಾಹಿತಿ ನೀಡಿದ್ದು, ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ದಾಖಲೆಗಳ ಪರಿಶೀಲನೆ ಮತ್ತು ವಾಹನಗಳ ತಪಾಸಣೆ ವೇಳೆ ನಿಯಮ ಉಲ್ಲಂಘನೆಗಳು ಕಂಡುಬಂದಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಿಂದ ಬಂದ ದೂರುಗಳನ್ನು ಸಂಬಂಧಿಸಿದ ನೋಂದಣಿ ಪ್ರಾಧಿಕಾರಗಳಿಗೆ ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R